‘ಎಲ್ಲದಕ್ಕೂ ಉತ್ತರ ಕೊಡುತ್ತೇನೆ’ – ಡಿ.ಕೆ ಶಿವಕುಮಾರ್
ನವದೆಹಲಿ:”ನನ್ನ ವಿರುದ್ಧದ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ನಂತರ ಅನೇಕರು ಮಾತನಾಡುತ್ತಿದ್ದಾರೆ. ಯಾರ್ಯಾರ ಮನಸ್ಸು ಮತ್ತು ನಾಲಿಗೆ ಮೇಲೆ ಏನೇನಿದೆ ಎಂಬುದು ಈಗ ತಿಳಿಯುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯಿಸಿದರು.
ಸಿಬಿಐ ತನಿಖೆಗೆ ನೀಡಿದ್ದ ಆದೇಶ ಹಿಂಪಡೆದ ಸರ್ಕಾರದ ನಿರ್ಧಾರದ ಬಗ್ಗೆ ವಿರೋಧ ಪಕ್ಷಗಳ ನಾಯಕರ ಹೇಳಿಕೆ ಕುರಿತು ಕೇಳಿದಾಗ ಅವರು ಈ ರೀತಿ ಉತ್ತರಿಸಿದರು.
“ತನಿಖೆಗೆ ಅನುಮತಿ ವಾಪಸ್ ಪಡೆದಿರುವ ಬೆಳವಣಿಗೆಯಿಂದ ಎಲ್ಲರ ಮನಸ್ಥಿತಿಯೂ ಅರ್ಥವಾಗುತ್ತಿದೆ. ಯಾರ್ಯಾರು ಗೆಳೆಯರು, ಅವರ ಭಾವನೆ ಏನಿದೆ ಎಂಬುದು ಈಗ ತಿಳಿಯುತ್ತಿದೆ. ಸಿಬಿಐ ತನಿಖೆಗೆ ಅನುಮತಿ ಹಿಂಪಡೆದಿರುವ ಬಗ್ಗೆ ಈಗ ಮಾತನಾಡಲು ಹೋಗುವುದಿಲ್ಲ. ಮುಂದೆ ಅದರ ಬಗ್ಗೆ ಖಂಡಿತವಾಗಿಯೂ ಮಾತನಾಡುತ್ತೇನೆ. ಎಲ್ಲದಕ್ಕೂ ಉತ್ತರ ಕೊಡುತ್ತೇನೆ” ಎಂದರು