Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕಾಂಗ್ರೆಸ್ ಡಿಎಂಕೆಯ ಬಿ ಟೀಮ್ ಆಗಿ ಪರಿವರ್ತನೆ ಆದ ಪರಿಣಾಮವೇ ಈ ಕಾವೇರಿ ಬಿಕ್ಕಟ್ಟು- ಹೆಚ್‌ಡಿಕೆ

ಬೆಂಗಳೂರು: ಕಾವೇರಿ ನೀರಿಗಾಗಿ ಬೆಂಗಳೂರು ಬಂದ್‌ಗೆ ಕರೆ ನೀಡಿದ ಹಿನ್ನೆಲೆ ರೈತರು ಹಾಗೂ ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ನಿರತ ಮುಖಂಡರನ್ನು, ಕಾರ್ಯಕರ್ತರನ್ನು ಪೊಲೀಸರು ಹವಶಕ್ಕೆ ಪಡೆದಿದ್ದು, ಈ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಟ್ವೀಟ ಮೂಲಕ ಕಾಂಗ್ರೇಸ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಬೆಂಗಳೂರು ಬಂದ್ ಕುರಿತು ಟ್ವೀಟ್ ಮಾಡಿರುವ ಅವರು , ಕಾವೇರಿ ನೀರಿಗಾಗಿ ನಡೆಯುತ್ತಿರುವ ಬೆಂಗಳೂರು ಬಂದ್‌ಗೆ ನನ್ನ ಸಂಪೂರ್ಣ ಬೆಂಬಲವಿದೆ. ಹೋರಾಟ ಶಾಂತಿಯುತವಾಗಿರಲಿ. ಬಂದ್ ಯಶಸ್ವಿಯಾಗಲಿ. ಜನತಾದಳ ಪಕ್ಷದ ಕಾರ್ಯಕರ್ತರೂ ಕೂಡ ಬಂದ್‌ನಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಇದೆಂಥಾ ಚೋದ್ಯ? ಒಂದು ಕಡೆ ಮೇಕೆದಾಟು ಬೇಕು ಎಂದು ಪಾದಯಾತ್ರೆ ಮಾಡಿದವರು, ಇಂದು ಕಾವೇರಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ರೈತರನ್ನು, ಹೋರಾಟಗಾರರನ್ನು ಬಂಧಿಸಿದ್ದಾರೆ. ರಾತ್ರೋರಾತ್ರಿ ಹೋರಾಟಗಾರರನ್ನು ಬಂಧಿಸಿರುವುದು ಕಾಂಗ್ರೆಸ್ ಸರ್ಕಾರದ ಕಿಡಿಗೇಡಿತನದ ಪರಮಾವಧಿ. ಕರ್ನಾಟಕದಲ್ಲಿ ಕಾಂಗ್ರೆಸ್ಸಿಗರಿಗೆ ಒಂದು ನ್ಯಾಯ, ಕನ್ನಡಿಗರಿಗೆ ಇನ್ನೊಂದು ನ್ಯಾಯ ಎನ್ನುವುದು ಇದೆಯಾ ಎಂದು ಪ್ರಶ್ನಿಸಿದ್ದಾರೆ.

ಕೋವಿಡ್ ನಿಯಮ ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮಾಡಬಹುದಾದರೆ, ನಾಡಿನ ಜೀವನಾಡಿ ಕಾವೇರಿಗಾಗಿ ಕನ್ನಡಿಗರು ಪ್ರತಿಭಟನೆ ನಡೆಸಬಾರದೇ? ಶಾಂತವಾಗಿ ಹೋರಾಟ ನಡೆಸುತ್ತಿದ್ದ ರೈತರು, ಹೋರಾಟಗಾರರನ್ನು ಬಂಧಿಸಿರುವುದು ಖಂಡನೀಯ. ಇದೇನು ಕನ್ನಡಿಗರ ಸರ್ಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರ್ಕಾರವೋ? ಇಷ್ಟಕ್ಕೂ ಕನ್ನಡಿಗರು ಮತ ಹಾಕಿದ್ದು ಯಾರಿಗೆ? ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಹೋರಾಟಗಾರರು, ರೈತರನ್ನು ಕೂಡಲೇ ಬಂಧಮುಕ್ತಗೊಳಿಸಬೇಕು. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಬೇಕು. ಕಾಂಗ್ರೆಸ್ ಪಕ್ಷವು ಡಿಎಂಕೆ ಪಕ್ಷದ ಬಿ ಟೀಮ್ ಆಗಿ ಪರಿವರ್ತನೆ ಆದ ಪರಿಣಾಮವೇ ಈ ಕಾವೇರಿ ಬಿಕ್ಕಟ್ಟು ಎನ್ನುವುದು ಕನ್ನಡಿಗರಿಗೆ ಈಗ ಸ್ಪಷ್ಟವಾಗಿ ಅರ್ಥವಾಗಿದೆ ಎಂದು ಆರೋಪಿಸಿದ್ದಾರೆ