Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಜಾತಿ ದೌರ್ಜನ್ಯ ಪ್ರಕರಣ: ಆರೋಪ ಪಟ್ಟಿ ದಾಖಲಾಗದ ಕುರಿತು ಸಿಎಂ ಗರಂ

ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಮತ್ತು ಜಾತಿ ದೌರ್ಜನ್ಯದ ಕೊಲೆ ಪ್ರಕರಣಗಳಲ್ಲಿ 120 ದಿನ ಕಳೆದರೂ ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಏಕೆ ದಾಖಲಾಗಿಲ್ಲ ಎಂದು ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೀಗೇ ಆದರೆ ಎಸ್.ಪಿ, ಡಿಸಿಪಿ ಗಳನ್ನು ಹೊಣೆ ಮಾಡಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅಂಕಿ ಅಂಶಗಳನ್ನು ಮುಂದಿಟ್ಟು ಅಧಿಕಾರಿಗಳನ್ನು ತೀವ್ರವಾಗಿ ಪ್ರಶ್ನಿಸಿದರು.

ಕಳೆದ ಐದು ವರ್ಷಗಳಲ್ಲಿ ದಾಖಲಾದ 10893 ಪ್ರಕರಣಗಳಲ್ಲಿ 1100 ಪ್ರಕರಣಗಳಲ್ಲಿ 120 ದಿನಗಳಲ್ಲಿಯೂ ಚಾರ್ಜ್‌ ಶೀಟ್‌ ಹಾಕಿಲ್ಲ. ಇದು ಪರಿಶಿಷ್ಟ ಜಾತಿ, ಪಂಗಡದವರ ಬಗ್ಗೆ ಅಧಿಕಾರಿಗಳ ಅಸಡ್ಡೆಯನ್ನು ತೋರಿಸುತ್ತದೆ. ಇದರಿಂದ ಸಂತ್ರಸ್ತರಿಗೆ ನ್ಯಾಯ ಕೊಡಿಸಿದಂತಾಗುವುದಿಲ್ಲ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು.

ಅಪರಾಧ ಪ್ರಕ್ರಿಯಾ ಸಂಹಿತೆ ಅಡಿಯಲ್ಲಿ 90 ದಿನಗಳೊಳಗೆ ಚಾರ್ಜ್‌ ಶೀಟ್‌ ಹಾಕದಿದ್ದರೆ, ಎಸ್ ಸಿ /ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ 60 ದಿನಗಳೊಳಗೆ ಆರೋಪ ಪಟ್ಟಿ ದಾಖಲಾಗದಿದ್ದರೆ ಆರೋಪಿಗಳಿಗೆ ಸಲೀಸಾಗಿ ಜಾಮೀನು ಸಿಗುತ್ತದೆ. ಹೀಗೆ ಜಾಮೀನು ಪಡೆದವರಿಗೆ ಕಾನೂನಿನ ಭಯ ಇರುತ್ತದಾ ಎಂದು ಖಾರವಾಗಿ ಪ್ರಶ್ನಿಸಿದರು.

ಪ್ರಕರಣಗಳ ತನಿಖಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಜಿ&ಐಜಿಗೆ ಸೂಚಿಸಿದರು.