Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ನಗರದ ನಾನಾ ಕಡೆ ಜಾಗ ಗುರುತಿಸಿ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಕ್ರಮ: ಎಸ್.ಎಸ್ ಮಲ್ಲಿಕಾರ್ಜುನ್

 

ದಾವಣಗೆರೆ;  ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೆಚ್ಚು ಬೇಡಿಕೆಯಿದ್ದು, ನಗರದ ನಾನಾ ಕಡೆ ಸೂಕ್ತ ಜಾಗ ಗುರುತಿಸಿ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ತಿಳಿಸಿದರು. 

ಶನಿವಾರ  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಗರದ ಕುಂದುವಾಡ ರಸ್ತೆಯ ಸಪ್ತಗಿರಿ ಶಾಲೆಯ ಪಕ್ಕದಲ್ಲಿ ಜರುಗಿದ  ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ನೂತನ ಕಟ್ಟಡಕ್ಕೆ ಭೂಮಿ ಪೂಜೆ ಕಾರ್ಯಕ್ರಮವನ್ನು ನೆರವೇರಿಸಿ ಅವರು ಮಾತನಾಡಿದರು.

ನಗರದಲ್ಲಿ ದೇವರಾಜು ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಕಟ್ಟಡವು ರೂ.3.26 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದ್ದು, ಗುಣಮಟ್ಟದ ಕಾಮಗಾರಿ ಹಾಗೂ ವ್ಯವಸ್ಥಿತ ಕೊಠಡಿಗಳನ್ನು ಹೊಂದಿರಬೇಕು ಹಾಗೂ ನಿಗಧಿತ ಅವಧಿಯಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಂಡು ವಿದ್ಯಾರ್ಥಿನಿಯರ ಅನುಕೂಲಕ್ಕೆ ಲಭ್ಯವಾಗಬೇಕು ಎಂದರು.

ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶದಿಂದ ನಗರಕ್ಕೆ ವಿದ್ಯಾಭ್ಯಾಸಕ್ಕಾಗಿ ಬರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು ಅಧಿಕಾರಿಗಳು ಪ್ರತಿಯೊಬ್ಬರಿಗೂ ಹಾಸ್ಟೆಲ್ ವ್ಯವಸ್ಥೆ ಮಾಡಿಕೊಡಬೇಕು ಹಾಗೂ ನೂತನ ಕಟ್ಟಡವನ್ನು ಅತ್ಯಂತ ವ್ಯವಸ್ಥಿತವಾಗಿ ನಿರ್ಮಾಣ ಮಾಡಬೇಕು. ವಿದ್ಯಾರ್ಥಿನಿಯರು ಹಾಸ್ಟೆಲ್ ಸೌಲಭ್ಯದ ಜೊತೆಗೆ ಗುಣಮಟ್ಟದ ಶಿಕ್ಷಣ ಪಡೆದು ಉನ್ನತ ಹುದ್ದೆಗೇರಬೇಕೆಂದರು.

ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ ಸರ್ಕಾರಿ ಒಡೆತನದ ಜಾಗ ಕಡಿಮೆ ಇದ್ದು, ಖಾಸಗಿಯಾಗಿ ಖರೀದಿಸಿ, ವಿದ್ಯಾರ್ಥಿ ನಿಲಯವನ್ನು ನಿರ್ಮಾಣ ಮಾಡಲಾಗುವುದು ಎಂದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗಾಯಿತ್ರಿ, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಪುಷ್ಪ ಎಸ್. ಗಡ್ಡಿ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸುದೀಪ್ ಪಿ. ಬನಾರೆ, ಸಹಾಯಕ ಇಂಜಿನಿಯರ್  ಪ್ರಿಯಾ ಕೆ. ಎ ಉಪಸ್ಥಿತರಿದ್ದರು.