Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಜಾತಿ ನಿಂದನೆ – ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿಯಾಗಿ ನಿಂದಿಸಿ ಜಾತಿ ನಿಂದನೆ ಮಾಡಿರುವ ಆರೋಪದಡಿ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಕನ್ನಡಪರ ಹೋರಾಟಗಾರ ಭೈರಪ್ಪ ಹರೀಶ್ ಕುಮಾರ್ ನೀಡಿರುವ ದೂರಿನನ್ವಯ ಸಂಪಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಹಿಂದೂಪರ ಕಾರ್ಯಕರ್ತನಾಗಿರುವ ಪುನೀತ್ ಕೆರೆಹಳ್ಳಿ ವಿರುದ್ಧ ಇತ್ತೀಚಿಗೆ ರೌಡಿಪಟ್ಟಿ ತೆರೆದು ಬಂಧಿಸಲಾಗಿತ್ತು. ಆ ಸಂಧರ್ಭದಲ್ಲಿ ಪೊಲೀಸರು ಸಲ್ಲಿಸಿದ್ದ ಚಾರ್ಜ್‌ಶೀಟ್ ಆಧರಿಸಿ ಮಾಧ್ಯಮಗಳಲ್ಲಿ ವರದಿಯಾದದ್ದನ್ನ ಭೈರಪ್ಪ ಹರೀಶ್ ಕುಮಾರ್ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು. ಬಿಡುಗಡೆಯಾದ ಬಳಿಕ ತಮ್ಮ ವಿರುದ್ಧ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಪುನೀತ್ ಕೆರೆಹಳ್ಳಿ ತಮ್ಮನ್ನ ಬಹಿರಂಗ ಚರ್ಚೆಗೆ ಆಹ್ವಾನಿಸಿ ಅವಾಚ್ಯವಾಗಿ ನಿಂದಿಸಿದ್ದಾನೆ. ಅಕ್ಟೋಬರ್ 17 ಹಾಗೂ 18ರಂದು ತನ್ನ ಫೇಸ್‌ಬುಕ್‌ ಖಾತೆಯಲ್ಲಿ ವಿವಿಧ ಪೋಸ್ಟ್ ಪ್ರಕಟಿಸಿರುವ ಪುನೀತ್ ಕೆರೆಹಳ್ಳಿ ತಮ್ಮ ವಿರುದ್ಧ ಅವಾಚ್ಯವಾಗಿ ನಿಂದಿಸಿ, ತಮ್ಮ ಕುಟುಂಬ ಹಾಗೂ ಮಕ್ಕಳನ್ನ ಉದ್ದೇಶಿಸಿ ತಲೆ ಎತ್ತಿಕೊಂಡು ಸಮಾಜದಲ್ಲಿ ತಿರುಗಾಡದಂತೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಹಾಗೂ ದಲಿತ ಸಮುದಾಯದವರಾದ ತಮ್ಮನ್ನ ಉದ್ದೇಶಿಸಿ ಜಾತಿನಿಂದನೆ ಮಾಡಲಾಗಿದೆ ಎಂದು ಭೈರಪ್ಪ ಹರೀಶ್ ಕುಮಾರ್ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ. ದೂರಿನನ್ವಯ ಪುನೀತ್ ಕೆರೆಹಳ್ಳಿ ವಿರುದ್ಧ ಜಾತಿ ನಿಂದನೆ, ಬೆದರಿಕೆ, ಹಾಗೂ ಅವಾಚ್ಯ ಶಬ್ಧಗಳಿಂದ ಮಿಂದಿಸಿರುವ ಆರೋಪದಡಿ ಸಂಪಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.