Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮಣಿಪುರದಲ್ಲಿ ಮತ್ತೆ ಹಿಂಸಾಚಾರ, ಮೂವರ ಸಾವು! ಹಲವರಿಗೆ ಗಾಯ

ಇಂಫಾಲ್: ಕಳೆದ ತಿಂಗಳು ತೀವ್ರ ಹಿಂಸಾಚಾರ, ಪ್ರತಿಭಟನೆಗಳಿಂದ ತತ್ತರಿಸಿದ್ದ ಮಣಿಪುರದಲ್ಲಿ ಕೆಲ ದಿನಗಳಿಂದ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿತ್ತು.ಆದರೆ, ಮತ್ತೆ ಅದೇ ಪರಿಸ್ಥಿತಿ ಮರುಕಳಿಸಿದೆ. ಸೋಮವಾರ ಬೆಳಗ್ಗೆ ಮಣಿಪುರದ ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಎರಡು ಸಶಸ್ತ್ರ ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂಫಾಲ್ ಪಶ್ಚಿಮ ಜಿಲ್ಲೆಯ ಕಾಂಗ್‌ಚುಪ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದು, ಗಾಯಗೊಂಡವರನ್ನು ಇಂಫಾಲ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಕಾಕ್ಚಿಂಗ್ ಜಿಲ್ಲೆಯ ಸೆರೋದಲ್ಲಿ ಎರಡು ಗುಂಪುಗಳ ನಡುವಿನ ಗುಂಡಿನ ಚಕಮಕಿಯಲ್ಲಿ ನಾಲ್ಕು ಜನರು ಗಾಯಗೊಂಡಿದ್ದಾರೆ.

https://suddimane.com/%e0%b2%b5%e0%b3%80%e0%b2%95%e0%b3%86%e0%b2%82%e0%b2%a1%e0%b3%8d-%e0%b2%b5%e0%b2%bf%e0%b2%a4%e0%b3%8d-%e0%b2%b0%e0%b2%ae%e0%b3%87%e0%b2%b6%e0%b3%8d-%e0%b2%95%e0%b2%be%e0%b2%b0%e0%b3%8d%e0%b2%af/

ಇನ್ನೂ ಮಣಿಪುರಕ್ಕೆ ಜೂನ್​ 1 ರಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ಭೇಟಿ ನೀಡಿದ್ದು, ಸರಣಿ ಭದ್ರತಾ ಸಭೆಗಳು ಹಾಗೂ ಕುಕಿ ಮತ್ತು ಮೈತೇಯಿ ಸಮುದಾಯಗಳ ಮುಖಂಡರ ನಡುವೆ ಸಂಧಾನ ಸಭೆಗಳನ್ನು ನಡೆಸಿದ್ದರು. ಇನ್ನೂ ಸಂಧಾನ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ್ದ ಅಮಿತ್ ಶಾ, ಮಣಿಪುರದಲ್ಲಿ ಶಾಂತಿ ಮರುಸ್ಥಾಪನೆ, ಕಾನೂನು ಸುವ್ಯವಸ್ಥೆ ಪಾಲನೆ ಸರಕಾರದ ಪ್ರಮುಖ ಆದ್ಯತೆಯಾಗಿದೆ. ಜನಾಂಗೀಯ ಹಿಂಸಾಚಾರದ ಬಗ್ಗೆ ತನಿಖೆ ನಡೆಸಲು ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಸದ್ಯದಲ್ಲೇ ಸಮಿತಿ ರಚಿಸಲಾಗುವುದು ಎಂದು ತಿಳಿಸಿದರು. ಕಳೆದ ತಿಂಗಳ ಹಿಂದೆ ಮಣಿಪುರದಲ್ಲಿ 80 ಕ್ಕೂ ಹೆಚ್ಚು ಜೀವಗಳನ್ನು ಬಲಿತೆಗೆದುಕೊಂಡ ಸರಣಿ ಹಿಂಸಾಚಾರದ ಬಗ್ಗೆ ತನಿಖೆ ನಡೆಸಲು ಗುವಾಹಟಿ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಅಜಯ್ ಲಂಬಾ ನೇತೃತ್ವದ ತನಿಖಾ ಆಯೋಗವನ್ನು ಕೇಂದ್ರವು ಭಾನುವಾರ ರಚಿಸಿದೆ.