‘ಯುವನಿಧಿ’ ನಗದು ವರ್ಗಾವಣೆ ಕಾರ್ಯಕ್ರಮಕ್ಕೆ ನಾಳೆ ಶಿವಮೊಗ್ಗದಲ್ಲಿ ಚಾಲನೆ
ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ 5ನೇ ಗ್ಯಾರಂಟಿ ಘೋಷಣೆ ‘ಯುವ ನಿಧಿ’ ಯೋಜನೆಯ ಫಲಾನುಭವಿಗಳಿಗೆ ನಗದು ವರ್ಗಾವಣೆ ಕಾರ್ಯಕ್ರಮವು ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಸ್ವಾಮಿ ವಿವೇಕಾನಂದ ಜನ್ಮ ದಿನವಾದ ಜನವರಿ 12 ರಂದು ನಡೆಯಲಿದೆ.
ನಾಳೆ ಬೆಳಗ್ಗೆ 11 ಗಂಟೆಗೆ ಆರಂಭವಾಗಲಿರುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಫಲಾನುಭವಿಗಳಿಗೆ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.
ಯುವನಿಧಿ ನಗದು ವರ್ಗಾವಣೆ ಕಾರ್ಯಕ್ರಮಕ್ಕೆ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಿಂದ ಸುಮಾರು 1 ಲಕ್ಷಕ್ಕೂ ಅಧಿಕ ಫಲಾನುಭವಿಗಳು ಹಾಗೂ ಅಷ್ಟೇ ಸಂಖ್ಯೆಯ ಜನರು ಭಾಗವಹಿಸುವ ನಿರೀಕ್ಷೆ ಇದೆ. ಹಾಗೂ ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನ ಸಚಿವರು, ನಾಯಕರು ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.
ಇನ್ನು ಕಾರ್ಯಕ್ರಮದ ನಿಮಿತ್ತ ಶಿವಮೊಗ್ಗಕ್ಕೆ ಸಿಎಂ ಸಿದ್ದರಾಮಯ್ಯ ಆಗಮನ ಹಿನ್ನೆಲೆ ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಹಲವು ರಸ್ತೆಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಈ ಹಿನ್ನೆಲೆ ಶಿವಮೊಗ್ಗ ನಗರ ಹಾಗೂ ಪ್ರದೇಶದ ಶಾಲಾ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ನಾಳೆ ಬೆಳಗ್ಗೆ 9ರಿಂದ ಸಂಜೆ 4 ಗಂಟೆವರೆಗೆ ಶಾಲೆ ನಡೆಸುವಂತೆ ಸೂಚಿಸಲಾಗಿದೆ.