Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತಾಸಕ್ತಿ ಕಾಪಾಡೋಣ- ಸರ್ವ ಪಕ್ಷದ ಸಭೆಯಲ್ಲಿ ನಿರ್ಣಯ

ಬೆಂಗಳೂರು: ತಮಿಳುನಾಡಿಗೆ ನೀರು ಬಿಡಬೇಕಾ ಬೇಡವಾ ಎನ್ನುವುದಕ್ಕಿಂತ ನಮ್ಮಲ್ಲಿ ನೀರೇ ಇಲ್ಲ. ಹೀಗಾಗಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತವನ್ನು ಎಲ್ಲರೂ ಒಟ್ಟಾಗಿ ಕಾಪಾಡೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸರ್ವ ಪಕ್ಷದ ಸಭೆಯಲ್ಲಿ ನಿರ್ಣಯಿಸಲಾಗಿದೆ.

ಕಾವೇರಿ ನೀರು ನಿರ್ವಹಣಾ ಸಮಿತಿ ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ಸ್‌ ನೀರು ಬಿಡುವಂತೆ ಆದೇಶ ಮಾಡಿರುವ ಹಿನ್ನೆಲೆಯಲ್ಲಿ ನಡೆದ ಸರ್ವ ಪಕ್ಷದ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

ಇದುವರೆಗಿನ ಆದೇಶದ ಪ್ರಕಾರ ನಾವು 99 ಟಿಎಂಸಿ ನೀರು ಬಿಡಬೇಕಿತ್ತು. ಆದರೆ ಇದುವರೆಗೂ 37 ಟಿಎಂಸಿ ಮಾತ್ರ ಹೋಗಿದೆ.ನಮಗೆ 70 ಟಿಎಂಸಿ ನೀರು ಬೆಳೆ ರಕ್ಷಣೆಗೆ ಬೇಕು. ಕುಡಿಯುವ ನೀರಿಗೆ 33 ಟಿಎಂಸಿ ನೀರು ಬೇಕು. ಕೈಗಾರಿಕೆಗಳಿಗೆ 3 ಟಿಎಂಸಿ ನೀರು ಬೇಕು. ಆದರೆ ನಮ್ಮಲ್ಲಿ ಸಂಗ್ರಹ ಇರುವುದು 53 ಟಿಎಂಸಿ ಮಾತ್ರ. ಹೀಗಾಗಿ ನಮ್ಮಲ್ಲಿ ನೀರೇ ಇಲ್ಲ. ನಮ್ಮ ಅಧಿಕಾರಿಗಳು ರಾಜ್ಯದ ವಾಸ್ತವಾಂಶವನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ.

ಆದರೂ ನಿತ್ಯ 5 ಟಿಎಂಸಿ ನೀರು ಬಿಡಲು ಸೂಚಿಸಲಾಗಿದೆ. ನಮ್ಮ ರೈತರ ಪ್ರಾಣವನ್ನು, ಹಿತವನ್ನು ಕಡೆಗಣಿಸಿ ನೀರು ಬಿಡಬೇಕು ಎಂದು ಯಾರೂ ಹೇಳಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಈ ವರ್ಷದ ಆಗಸ್ಟ್‌ ತಿಂಗಳಿನಲ್ಲಿ ಕಳೆದ 123 ವರ್ಷಗಳ ಇದೇ ಅವಧಿಗೆ ಹೋಲಿಸಿದರೆ ಅತಿ ಕಡಿಮೆ ಮಳೆಯಾಗಿದೆ. ಅತೀ ಕಡಿಮೆ ನೀರು ಸಂಗ್ರಹದಲ್ಲಿದೆ. ಈ ಹಿನ್ನೆಲೆಯಲ್ಲಿ ನೀರಿನ ಕೊರತೆ ಇರುವುದರಿಂದ ಕೈಗೊಳ್ಳಬಹುದಾದ ಕಾನೂನು ಕ್ರಮಗಳು, ರಾಜಕೀಯ ಕ್ರಮಗಳು ಹಾಗೂ ಕೇಂದ್ರ ಸರ್ಕಾರದ ನೆರವು ಕೋರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ತಾಂತ್ರಿಕ ಪರಿಣತರು, ಕಾನೂನು ತಜ್ಞರು, ಆ ಭಾಗದ ಜನಪ್ರತಿನಿಧಿಗಳು ಹಾಗೂ ವಿವಿಧ ಪಕ್ಷಗಳ ಮುಖಂಡರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರಾದ ಡಾ. ಜಿ. ಪರಮೇಶ್ವರ, ಹೆಚ್‌.ಕೆ.ಪಾಟೀಲ, ಚೆಲುವರಾಯಸ್ವಾಮಿ, ಕೆ.ಹೆಚ್. ಮುನಿಯಪ್ಪ, ಕೆ.ಎನ್. ರಾಜಣ್ಣ, ಎನ್‌.ಎಸ್. ಭೋಸರಾಜು, ಕೆ.ವೆಂಕಟೇಶ್‌, ಜಮೀರ್ ಅಹಮದ್ ಖಾನ್ , ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ, ಈ ಭಾಗದ ಸಂಸದರು, ಶಾಸಕರು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ, ಕಾನೂನು ತಜ್ಞರು ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.