‘ರಾಜ್ಯದ ರೈತರ ಹಿತರಕ್ಷಣೆಗೆ ಅಡ್ಡಿಯಾಗದಂತೆ ವಿವಾದ ಬಗೆಹರಿಸುತ್ತೇವೆ’ – ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿವಾದವನ್ನು ರಾಜ್ಯದ ರೈತರ ಹಿತರಕ್ಷಣೆಗೆ ಅಡ್ಡಿಯಾಗದಂತೆ ಬಗೆಹರಿಸಲು ನಮ್ಮ ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ವಿವಾದ ಈಗ ನ್ಯಾಯಾಂಗದ ಅಂಗಳದಲ್ಲಿರುವುದರಿಂದ ಸಂವಿಧಾನಕ್ಕೆ ಬದ್ದವಾಗಿರುವ ಸರ್ಕಾರ ಜವಾಬ್ದಾರಿಯುತವಾಗಿ ವರ್ತಿಸಬೇಕಾಗುತ್ತದೆ. ಈ ವರೆಗಿನ ಎಲ್ಲ ಪಕ್ಷಗಳ ಸರ್ಕಾರಗಳು ಅನಿವಾರ್ಯವಾಗಿ ನ್ಯಾಯಾಲಯದ ಆದೇಶ ಪಾಲನೆ ಮಾಡಿರುವ ಇತಿಹಾಸ ಕೂಡಾ ನಮ್ಮ ಕಣ್ಣ ಮುಂದಿದೆ. ಈಗಿನ ವಿವಾದವನ್ನು ರಾಜ್ಯದ ಹಿತ ಮತ್ತು ನ್ಯಾಯಾಂಗದ ಗೌರವಕ್ಕೆ ಧಕ್ಕೆಯಾಗದಂತೆ ಸೂಕ್ಷ್ಮವಾಗಿ ನಿರ್ವಹಿಸಬೇಕಾಗಿದೆ ಎಂದಿದ್ದಾರೆ.
ರಾಜ್ಯ ಸರ್ಕಾರ ಆ ಪ್ರಯತ್ನದಲ್ಲಿದೆ. ನಾವು ಈಗಾಗಲೇ ಕಾನೂನು ಮತ್ತು ನೀರಾವರಿ ತಜ್ಞರ ಜೊತೆ ನಿರಂತರ ಸಂಪರ್ಕದಲ್ಲಿದ್ದು ಅವರ ಸಲಹೆ ಮೇರೆಗೆ ಮುಂದಿನ ನಿರ್ಧಾರವನ್ನು ಕೈಗೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.