Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್‌ ಮೈತ್ರಿ?

ನವದೆಹಲಿ: 2024ರ ಕರ್ನಾಟಕ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ಕೈಜೋಡಿಸಲು ನಿರ್ಧರಿಸಿರುವುದಾಗಿ ಮೂಲಗಳು ತಿಳಿಸಿರುವುದು ವರದಿಯಾಗಿದೆ.

ಇತ್ತೀಚೆಗಷ್ಟೇ ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡರು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ಮೈತ್ರಿ ಕುರಿತು ಚರ್ಚೆ ನಡೆಸಿರುವುದಾಗಿ ವರದಿ ಹೇಳಿದೆ.

ಚರ್ಚೆಯ ವೇಳೆ ಬಿಜೆಪಿ ಜತೆಗಿನ ಮೈತ್ರಿಯೊಂದಿಗೆ ಕರ್ನಾಟಕದಲ್ಲಿ ನಾಲ್ಕು ಲೋಕಸಭಾ ಸ್ಥಾನ ಬಿಟ್ಟು ಕೊಡುವಂತೆ ದೇವೇಗೌಡರು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ. ಹಾಸನ, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಬಿಟ್ಟುಕೊಡಲು ಬಿಜೆಪಿ ಸಮ್ಮತಿಸಿದ್ದು, ಇನ್ನೊಂದು ಕ್ಷೇತ್ರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಐದು ಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ಎಚ್.ಡಿ.ದೇವೇಗೌಡರು ಬೇಡಿಕೆ ಇಟ್ಟಿದ್ದಾರೆನ್ನಲಾಗಿದ್ದು, ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರಿಗೆ ಅವಕಾಶ ನೀಡುವುದಾಗಿ ಭರವಸೆ ನೀಡಿದ್ದರಿಂದ ಮಂಡ್ಯ ಕ್ಷೇತ್ರ ಬಿಟ್ಟುಕೊಡಲು ಜೆ.ಪಿ.ನಡ್ಡಾ ಮತ್ತು ಅಮಿತ್‌ ಶಾ ನಿರಾಕರಿಸಿರುವುದಾಗಿ ಮೂಲಗಳು ಹೇಳಿವೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆಗಿನ ಜೆಡಿಎಸ್‌ ಮೈತ್ರಿ ಸಂಬಂಧ ಇನ್ನೂ ಹೆಚ್ಚಿನ ಮಾತುಕತೆ ನಡೆಯುವ  ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.