Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ವರ್ಷಕ್ಕೆ ಮೂರು ಬಾರಿ ನಡೆಯಲಿದೆ ಎಸೆಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆ – ಮಾರ್ಗಸೂಚಿ ಪ್ರಕಟ

ಬೆಂಗಳೂರು: ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಮೂರು ಬಾರಿ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ತೀರ್ಮಾನಿಸಿದ್ದು, ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಮಾರ್ಗಸೂಚಿಯ ಪ್ರಕಾರ, ಎಸೆಸೆಲ್ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ವಾರ್ಷಿಕ ಹಾಜರಾತಿ ಶೇ.75 ಕಡ್ಡಾಯವಾಗಿರಬೇಕು. ಶೇ.75ಕ್ಕಿಂತ ಕಡಿಮೆ ಹಾಜರಾತಿ ಹೊಂದಿದಲ್ಲಿ ಪರೀಕ್ಷೆ ಬರೆಯಲು ಅರ್ಹರಿರುವುದಿಲ್ಲ. ಪ್ರಥಮ ಬಾರಿಗೆ ಪರೀಕ್ಷೆ ತೆಗೆದುಕೊಳ್ಳುವ ಹೊಸಬರು ಮತ್ತು ಖಾಸಗಿ ಅಭ್ಯರ್ಥಿಗಳು ಎಲ್ಲ ವಿಷಯಗಳಲ್ಲಿ ಪರೀಕ್ಷೆ-1 ಬರೆಯುವುದು ಕಡ್ಡಾಯವಾಗಿರುತ್ತದೆ. ಹಾಗಾಗಿ ನೇರವಾಗಿ ಪರೀಕ್ಷೆ-2 ಮತ್ತು ಪರೀಕ್ಷೆ-3ಕ್ಕೆ ಹಾಜರಾಗುವಂತಿಲ್ಲ ಎಂದು ತಿಳಿಸಿದೆ.

ಇನ್ನು ವಿದ್ಯಾರ್ಥಿಗಳಿಗೆ ಆತಂರಿಕ ಅಂಕಗಳನ್ನು ನೀಡುವ ಸಂಬಂಧ ಜಿಲ್ಲಾ ಉಪನಿರ್ದೇಶಕರು ಅಗತ್ಯ ತನಿಖಾ ತಂಡವನ್ನು ರಚಿಸಿ ಪ್ರತಿಯೊಂದು ಕಾಲೇಜಿಗೆ ಭೇಟಿ ನೀಡಿ, ಹಾಜರಾದವರ, ಗೈರು ಹಾಜರಾದವರ ಹಾಗೂ ನೋಂದಣಿಯಾದ ವಿದ್ಯಾರ್ಥಿಗಳ ಬಗ್ಗೆ ಪರಿಶೀಲನೆಯನ್ನು ನಡೆಸಬೇಕು ಎಂದು ಸೂಚಿಸಿದೆ.

ಪರೀಕ್ಷೆ-1ರಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ 2 ಮತ್ತು 3ನೆ ಪರೀಕ್ಷೆ ತೆಗೆದುಕೊಳ್ಳಲು ಇಚ್ಛೆ ಇಲ್ಲದಿದ್ದಲ್ಲಿ ಅಂತಹ ಸಂದರ್ಭದಲ್ಲಿ ಅವರಿಗೆ ಅಂಕಪಟ್ಟಿಗಳನ್ನು ವಿತರಿಸಲು ಕ್ರಮ ವಹಿಸಲಾಗುವುದು ಎಂದು ಇಲಾಖೆಯು ತಿಳಿಸಿದೆ.