Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ಸರ್ಕಾರಕ್ಕೆ ಹಿಜಬ್‌ ವಾಪಸ್‌ ಆದೇಶ ಹೊರಡಿಸಲು ಕೇವಲ 30 ನಿಮಿಷ ಸಾಕು’- ಓವೈಸಿ

ಹೈದರಾಬಾದ್: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು 7 ತಿಂಗಳಾದರೂ ರಾಜ್ಯದಲ್ಲಿ ಹಿಜಾಬ್ ನಿಷೇಧವನ್ನು ಹಿಂತೆಗೆದುಕೊಳ್ಳುವ ಆದೇಶವನ್ನು ಹೊರಡಿಸಿಲ್ಲ ಎಂದು ಕರ್ನಾಟಕ ಸರ್ಕಾರ ವಿರುದ್ದ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಬ್‌ ನಿಷೇಧ ವಾಪಸ್‌ಗೆ ಕರ್ನಾಟಕ ಸರ್ಕಾರ ಏಳು ತಿಂಗಳು ಏಕೆ ತೆಗೆದುಕೊಂಡಿದೆ? ಸಿಎಂ ಸಿದ್ದರಾಮಯ್ಯ ಅವರು, ನಿಮಗೆ ಬೇಕಾದ್ದನ್ನು ಅವರು ಧರಿಸಬಹುದು ಅಂತಾ ಹೇಳಿದ್ರು. ಇದಾದ ಕೆಲವೇ ಗಂಟೆಗಳಲ್ಲಿ ನಾವು ಇನ್ನೂ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದರು.
ಇದು ಅತ್ಯಂತ ದುರದೃಷ್ಟಕರ ಎಂದು ಓವೈಸಿ ಬೇಸರ ವ್ಯಕ್ತಪಡಿಸಿದ್ದಾರೆ

 

ಕರ್ನಾಟಕದ ಮುಸ್ಲಿಮರು ನಿರಾಸೆ ಅನುಭವಿಸುತ್ತಿದ್ದಾರೆ. ಹಿಜಬ್‌ ವಾಪಸ್‌ಗೆ ಆದೇಶ ಹೊರಡಿಸಲು ಕೇವಲ 30 ನಿಮಿಷ ಸಾಕು. ಹೀಗಿರುವಾಗ ಕರ್ನಾಟಕ ಸರ್ಕಾರವನ್ನು ತಡೆಯುತ್ತಿರುವವರು ಯಾರು ಎಂದು ಟಾಂಗ್‌ ಕೊಟ್ಟಿದ್ದಾರೆ.

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಬ್ ಧರಿಸುವುದರ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳುವ ಬಗ್ಗೆ ಆಡಳಿತವು ಚಿಂತನೆ ನಡೆಸುತ್ತಿದೆ ಮತ್ತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಹಿಜಬ್‌ ವಾಪಸ್‌ ಕುರಿತು ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಪಕ್ಷ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಸಿದ್ದರಾಮಯ್ಯ ಅವರು ವೋಟಿಗಾಗಿ ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.