Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕನ್ನಡ ಹೋರಾಟಗಾರರ ಬಂಧನದಿಂದ ದುಃಖ ತಂದಿದೆ : ಬಸವರಾಜ ಬೊಮ್ಮಾಯಿ

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ ಕನ್ನಡ ಹೋರಾಟಗಾರರನ್ನು ಜೈಲಿಗೆ ಹಾಕಿರುವುದು ದುಖವಾಗಿದ್ದು. ಕನ್ನಡ ಹೋರಾಟಗಾರರಿಗೆ ನಾವು ಬೆಂಬಲಿಸಬೇಕು. ಸರ್ಕಾರ ಸರಿಯಾಗಿ ಕಾನೂನು ಅನುಷ್ಠಾನ ಮಾಡದಿರುವುದಕ್ಕೆ ಕನ್ನಡಪರ ಸಂಘಟನೆಗಳು ಹೋರಾಟದ ಹಾದಿ ಹಿಡಿಯಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತು ಏರ್ಪಡಿಸಿದ್ದ ರಾಷ್ಟ್ರಕವಿ ಕುವೆಂಪು ಅವರ ನವೀಕೃತ ಸಭಾಂಗಣ ಹಾಗೂ ಕುವೆಂಪು ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಾನು ಸಿಎಂ ಆಗಿದ್ದಾಗ ಸುಮಾರು ಎರಡು ಸಾವಿರ ಕನ್ನಡ ಹೋರಾಟಗಾರರ ಪ್ರಕರಣಗಳನ್ನು ವಾಪಸ್ ಪಡೆದಿದ್ದೇವು. ನಾಮಪಲಕಗಳಲ್ಲಿ ಕಡ್ಡಾಯ ಕನ್ನಡ ಅನುಷ್ಠಾನ ಮಾಡದಿರುವುದರಿಂದ ಈ ಪರಿಸ್ಥಿತಿ ಬಂದಿದೆ. ಆಡಳಿತಗಾರರಿಗೆ ಸೂಕ್ಷ್ಮತೆ ಇರಬೇಕು ಎಂದು ಹೇಳಿದರು.

ನಾವು ಕನ್ನಡದ ಅನುಷ್ಠಾನಕ್ಕಾಗಿ ವಿಧೇಯಕ ಜಾರಿಗೊಳಿಸಿದ್ದೇವು. ಸ್ವಾತಂತ್ರ್ಯ ಬಂದು ಎಪ್ಪತೈದು ವರ್ಷಗಳಾಗಿವೆ. ಕನ್ನಡ ನಾಡಿನಲ್ಲಿ ಕನ್ನಡದ ಅನುಷ್ಟಾನಕ್ಕಾಗಿ ಕಾನೂನು ಮಾಡುವ ಅನಿವಾರ್ಯತೆ ಬಂದಿರುವುದು ಬೇಸರದ ಸಂಗತಿ. ಆದರೆ, ಈಗ ಕಾನೂನೂ ಮಾಡದಿದ್ದರೆ ನಮ್ಮ ಮಕ್ಕಳಿಗೆ ಕಷ್ಟವಾಗಲಿದೆ. ಕಾನೂನು ಅನುಷ್ಠಾನ ಮಾಡದಿದ್ದರೆ ಅದು ದುರ್ದೈವ. ಕನ್ನಡ ಅನುಷ್ಠಾನ ಆಗದಿದ್ದರಿಂದ ಕನ್ನಡ ಹೋರಾಟಗಾರರು ಪ್ರತಿಭಟನೆ ಮಾಡುತ್ತಿದ್ದಾರೆ. ಯಾವ ನಾಡಿನಲ್ಲಿ ಕಾನೂನು ಅನುಷ್ಠಾನ ಮಾಡುವ ವ್ಯವಸ್ಥೆ ಇರುತ್ತದೆಯೋ ಅಲ್ಲಿ ಈ ರೀತಿಯ ಪ್ರತಿಭಟನೆಗಳು ನಡೆಯುವುದಿಲ್ಲ. ಯಾವ ನಾಡಿನಲ್ಲಿ ಕಾನೂನು ಅನುಷ್ಠಾನ ಮಾಡುವುದಿಲ್ಲವೋ ಈ ರೀತಿಯ ಘಟನೆಗಳು ನಡೆಯುತ್ತವೆ ಎಂದು ಹೇಳಿದರು.

ಕನ್ನಡದ ಉಳಿವಿಗೆ ಕನ್ನಡ ಸಾಹಿತ್ಯ ಪರಿಷತ್ತು ಸಾಕಷ್ಟು ಶ್ರಮ ಹಾಕಿದೆ. ನಾನು ಮುಖ್ಯಮಂತ್ರಿ ಇದ್ದಾಗ ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ವಿಕೃತಗೊಳಿಸುವ ಪ್ರಯತ್ನ ಮಾಡಿದ್ದರು. ಆದರೆ, ನಾನು ಸುವರ್ಣ ಸೌಧದ ಮುಂದೆ ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ಅಂಬೇಡ್ಕರ್ ಹಾಗೂ ಗಾಂಧಿ ಅವರ ಪ್ರತಿಮೆ ನಿಲ್ಲಿಸುವ ಕೆಲಸ ಮಾಡಿದ್ದೇನೆ ಎಂದರು.
ಕನ್ನಡ ನಿತ್ಯ ನಿರಂತರವಾಗಿರಬೇಕೆಂದರೆ ಕನ್ನಡಡಿಗರು ಜಾಗೃತರಾಗಿರಬೇಕು. ಜಗತ್ತು ಬದಲಾಗುತ್ತಿದೆ. ಸವಾಲುಗಳನ್ನ ಎದುರಿಸಲು ನಮ್ಮ ಮಕ್ಕಳನ್ನು ಸಿದ್ದಪಡಿಸಬೇಕಿದೆ. ಇಲ್ಲಿ ಐಟಿ ಬಿಟಿ ಯಾಕೆ ಅಭಿವೃದ್ಧಿಯಾಗಿದೆ ಎಂದರೆ. ಇಲ್ಲಿನ ಮಕ್ಕಳು ಜ್ಞಾನವಂತರಿದ್ದಾರೆ. ಸಾಧನೆ ಮಾಡಿದ್ದಾರೆ. ಅದೇ ಕಾರಣಕ್ಕೆ ಐಟಿ ಬಿಟಿಯವರು ಇಲ್ಲಿಗೆ ಬಂದಿದ್ದಾರೆ ಎಂದರು.