Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಗೃಹಲಕ್ಷ್ಮಿ ಯೋಜನೆಯ ತಾಂತ್ರಿಕ ಸಮಸ್ಯೆ ಬಗೆಹರಿಸಲು ಸಚಿವೆ ಹೆಬ್ಬಾಳಕರ್ ಸೂಚನೆ

ಬೆಂಗಳೂರು: ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ತ್ವರಿಗತಿಯಲ್ಲಿ ಹಣ ಸಂದಾಯ ಮಾಡಬೇಕು. ತಾಂತ್ರಿಕ ಕಾರಣಗಳಿಂದ ಸಮಸ್ಯೆ ಎದುರಿಸುತ್ತಿರುವ ಫಲಾನುಭವಿಗಳ ಖಾತೆಗೆ ಶೀಘ್ರ ಹಣ ಸಂದಾಯವಾಗುವಂತೆ ಇಲಾಖೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಸೂಚಿಸಿದ್ದಾರೆ. ವಿಧಾನಸೌಧದ ತಮ್ಮ ಕಚೇರಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಬೇಕೆಂದು ತಿಳಿಸಿದರು.

ಇಲಾಖೆಯ ಉಪ ನಿದೇಶಕರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಇ-ಗವರ್ನೆನ್ಸ್‌ ಇಲಾಖೆಯ ಸಹಕಾರದೊಂದಿಗೆ ಆಗಿರುವ ಕೆಲವೊಂದು ತಾಂತ್ರಿಕ ನೂನ್ಯತೆಗಳನ್ನು ಪರಿಪಡಿಸಬೇಕು. ಅಂಗನವಾಡಿ ಕಾರ್ಯಕರ್ತೆಯರ ಸಹಕಾರದೊಂದಿಗೆ ಮನೆ ಮನೆಗೆ ತೆರಳಿ ನೋಂದಣಿಯಲ್ಲಿ ಆಗಿರುವ ಸಮಸ್ಯೆಗಳನ್ನು ಇತ್ಯರ್ಥಪಡಿಸಬೇಕೆಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅಧಿಕಾರಿಗಳಿಗೆ ಸೂಚಿಸಿದರು. ಆಗಸ್ಟ್‌ ತಿಂಗಳಿನಲ್ಲಿ ಶೇಕಡ 88 ರಷ್ಟು ಮಂದಿಗೆ ಹಣ ಸಂದಾಯವಾಗಿದ್ದು, ಸೆಪ್ಟೆಂಬರ್‌ ತಿಂಗಳ ಹಣ ಹಂತ ಹಂತವಾಗಿ ಸಂದಾಯವಾಗುತ್ತಿದೆ. ಅಕ್ಟೋಬರ್‌ ತಿಂಗಳ ಹಣ ಶೇಕಡ 100ರಷ್ಟು ಫಲಾನುಭವಿಗಳಿಗೆ ಸಂದಾಯವಾಗುವಂತೆ ಮಾಡಬೇಕು ಎಂದು ಸಚಿವರು ಹೇಳಿದರು.

ಈ ವೇಳೆ ಇಲಾಖೆ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್‌, ನಿರ್ದೇಶಕಿ ಎಂ.ಎಸ್.ಅರ್ಚನಾ, ಸಚಿವರ ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್‌ ಸೇರಿದಂತೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.