Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ನಾಡಗೀತೆ ಕಡ್ಡಾಯವಲ್ಲ ವಿವಾದ: ಒಂದು ಸಣ್ಣ ಪ್ರಿಂಟ್​ ಸಮಸ್ಯೆ – ತಂಗಡಗಿ ಸ್ಪಷ್ಟನೆ

ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬ ಸುತ್ತೋಲೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್​ ತಂಗಡಗಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಒಂದು ಸಣ್ಣ ಪ್ರಿಂಟ್ ಸಮಸ್ಯೆ ಆಗಿದೆ. ನಮಗೆ ಎಲ್ಲ ಶಾಲೆಗಳು ಒಂದೆ. ಆದೇಶ ಮಾಡಬೇಕಾದರೆ ಸರ್ಕಾರಿ ಶಾಲೆ ಅನುದಾನಿತ‌ ಶಾಲೆ ಅಂತ ಪ್ರಿಂಟ್​​ ಮಿಸ್ಟೇಕ್​ ಆಗಿದೆ ಎಂದು ಶಿವರಾಜ್​ ತಂಗಡಗಿ ಹೇಳಿಕೆ ನೀಡಿದ್ದಾರೆ.

ಅದು ಎಲ್ಲ ಶಾಲೆಗಳು ಅಂತ ತಿದ್ದುಪಡಿ ಮಾಡಿಸುತ್ತೇವೆ. ನಮ್ಮ ಸರ್ಕಾರಕ್ಕೆ ಕನ್ನಡ ಬಗ್ಗೆ ಕಾಳಜಿ ಇದೆ. ನಾವು ಬಹಳ ಸ್ಪಷ್ಟವಾಗಿ ಇದ್ದೇವೆ. ಆದೇಶ ಪ್ರತಿಯ ಸಾಧಕ-ಬಾಧಕ ಹೇಳಬೇಕು. ಸಹಜವಾಗಿ ಸುತ್ತೋಲೆ ಒಳಗಡೆ ಸಣ್ಣಪುಟ್ಟ ಸಮಸ್ಯೆ ಆಗಿದೆ, ತಿದ್ದಿಕೊಳ್ಳುತ್ತೇವೆ ಎಂದು ಹೇಳಿದರು.

ರಾಜ್ಯ ಸರ್ಕಾರದ ಸುತ್ತೋಲೆಯಲ್ಲಿ ಏನಿದೆ?
ರಾಷ್ಟ್ರ ಕವಿ, ಜ್ಞಾನಪೀಠ ಪುರಸ್ಕೃತ ಡಾ. ಕುವೆಂಪುರವರ ‘ಜಯ ಭಾರತ ಜನನಿಯ ತನುಜಾತೆ’ ಕವನವನ್ನು ‘ನಾಡಗೀತೆ’ಯಾಗಿ ಘೋಷಿಸುವ ಕುರಿತು ಹೊರಡಿಸಲಾದ ಸರ್ಕಾರದ ಆದೇಶ ಹಾಗೂ ಅದಕ್ಕೆ ಫೆಬ್ರವರಿ 1ರಂದು ಮಾಡಲಾದ ತಿದ್ದುಪಡಿ ಪ್ರಕಾರ, ‘ಎಲ್ಲಾ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು’ ಎಂಬುದರ ಬದಲಾಗಿ, ‘ಸರ್ಕಾರಿ ಶಾಲೆಗಳು, ಅನುದಾನಿತ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು’ ಎಂದು ತಿದ್ದಿ ಓದಿಕೊಳ್ಳತಕ್ಕದ್ದು ಎಂಬುದಾಗಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ಈ ಮೇಲಿನ ಸುತ್ತೋಲೆಯಲ್ಲಿ ‘ಎಲ್ಲಾ ಶಾಲೆಗಳಲ್ಲಿ ಕಾರ್ಯಕ್ರಮದ ಆರಂಭದಲ್ಲಿ ನಾಡಗೀತೆಯನ್ನು ಹಾಡುವುದು’ ಎಂಬುದರ ಬದಲಾಗಿ, ‘ಸರ್ಕಾರಿ ಶಾಲೆಗಳು, ಅನುದಾನಿತ ಶಾಲೆಗಳಲ್ಲಿ’ ಎಂದು ಬದಲಾಯಿಸಲಾಗಿದೆ. ಹೀಗಾಗಿ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬರ್ಥ ಬರುತ್ತದೆ.