Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ಮೋದಿ ಅವರು ಒಕ್ಕೂಟ ವ್ಯವಸ್ಥೆಗೆ ಅಪಾಯ’- ಸಿ.ಎಂ

ಬೆಂಗಳೂರು: ಮೋದಿ ಅವರು ಒಕ್ಕೂಟ ವ್ಯವಸ್ಥೆಗೆ ಅಪಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದರು.

ವಿಧಾನ‌ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡುವಾಗ, ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ವಿವರಿಸುವಾಗ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಬಿಸಿ ಬಿಸಿ ವಾಗ್ವಾದ ನಡೆಯಿತು.

ಕೇಂದ್ರದಲ್ಲಿ UPA ಸರ್ಕಾರ ಇದ್ದಾಗ ನಡೆದಿದ್ದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮುಖ್ಯಮಂತ್ರಿ ಆಗಿದ್ದ ಮೋದಿಯವರು, ಯುಪಿಎ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಬೆದರಿಕೆ ಎಂದು ಹೇಳಿದ್ದ ಮಾತನ್ನು ಮುಖ್ಯಮಂತ್ರಿಗಳು ಉಲ್ಲೇಖಿಸಿದರು.

ಮೋದಿ ಅವರು ಪ್ರಧಾನ ಮಂತ್ರಿ ಆಗಿದ್ದಾಗ, ರಾಜ್ಯಗಳು ಕೇಂದ್ರದ ಮುಂದೆ ಭಿಕ್ಷುಕರಲ್ಲ. ಗುಜರಾತ್ ರಾಜ್ಯದಿಂದ ಸಂಗ್ರಹ ಆಗುವ ತೆರಿಗೆಯಲ್ಲಿ ಶೇ50 ರಷ್ಟು ವಾಪಾಸ್ ಕೊಡಿ ಎಂದು ಕೇಂದ್ರಕ್ಕೆ ಕೇಳಿದ್ದರು. ಗುಜರಾತ್ ರಾಜ್ಯದ ತೆರಿಗೆಯನ್ನು ನಾವು ಕೇಂದ್ರಕ್ಕೆ ಕೊಡುವುದಿಲ್ಲ ಎನ್ನುವ ಮಾತನ್ನೂ ಮೋದಿ ಅವರು ಆಡಿದ್ದರು. ಆದರೆ ಈಗ ಅದೇ ಮೋದಿ ಅವರು ಪ್ರಧಾನಿ ಆಗಿರುವಾಗ ಕರ್ನಾಟಕ ರಾಜ್ಯಕ್ಕೆ ವಾಪಾಸ್ ಕೊಡುತ್ತಿರುವುದು ಶೇ 12-13 ರಷ್ಟು ಮಾತ್ರ. ಮೋದಿ ಅವರು ಆಗೊಂದು ಮಾತು ಈಗೊಂದು ರೀತಿ ಮಾತನಾಡಿದ್ದಾರೆ. ಇದನ್ನು ಪ್ರಸ್ತಾಪಿಸಿದರೆ ನಿಮಗೇಕೆ ಸಿಟ್ಟು ಎಂದು ಮುಖ್ಯಮಂತ್ರಿಗಳು ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದರು.

ನಾವು ಕೊಡುವ ಪ್ರತಿ 100 ರೂಪಾಯಿಗೆ ಕೇವಲ 12 ರೂ ವಾಪಾಸ್ ಕೊಟ್ಟರೆ ರಾಜ್ಯದ ಅಭಿವೃದ್ಧಿ ಆಗಲು ಹೇಗೆ ಸಾಧ್ಯ? ಇಷ್ಟು ಕಡಿಮೆ ಪಾಲು ನಮಗೆ ಕೊಟ್ಟರೆ ರಾಜ್ಯದ ಶೂದ್ರರು, ದಲಿತರು, ಆದಿವಾಸಿಗಳು, ದುಡಿಯುವವರು, ಶ್ರಮಿಕರು, ಯುವಕರ, ಮಹಿಳೆಯರ ಅಭಿವೃದ್ಧಿ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಕೇಂದ್ರದಿಂದ ರಾಜ್ಯಕ್ಕೆ ಬರುತ್ತಿರುವ ಹಣದ ಪಾಲು ಅನ್ಯಾಯವಾದುದು.ಅದೇ ಪ್ರಧಾನಿ ಮಂತ್ರಿಗಳು ಗುಜರಾತಿನ ಸಿಎಂ ಆಗಿದ್ದಾಗ 2012 ರಲ್ಲಿ ಗುಜರಾತಿಗೆ ಬರುತ್ತಿರುವ ಆರ್ಥಿಕ ಪಾಲನ್ನು ವಿರೋಧಿಸಿದ್ದರು. ಗುಜರಾತ್ ರಾಜ್ಯ ’ನಾವು ಭಿಕ್ಷುಕ ರಾಜ್ಯವೇ, ನಾವು ಭಿಕ್ಷುಕರೆ, ನಾವು ಕೇಂದ್ರದ ಕರುಣೆಯ ಮೇಲೆ ಬದುಕಬೇಕೆ’ ಎಂದಿದ್ದರು. ಅಂದಿನ ಕೇಂದ್ರಕ್ಕೆ ‘ಗುಜರಾತಿನಿಂದ ತೆರಿಗೆ ತೆಗೆದುಕೊಳ್ಳಬೇಡಿ, ಅದನ್ನು ನಾವೇ ಬಳಸಿಕೊಳ್ಳುತ್ತೇವೆ’ಎಂದು ಮೋದಿ ಅವರು ಅಂದಿದ್ದರು. ಇದು ಸಂವಿಧಾನ, ಒಕ್ಕೂಟ ವ್ಯವಸ್ಥೆಗೆ ವಿರೋಧವಲ್ಲವೇ ಎಂದು ಅಂದಿನ ಮೋದಿಯವರ ಮಾತನ್ನೇ ಉಲ್ಲೇಖಿಸಿ ಸಿಎಂ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.