Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ಬೂತ್ ಗೆದ್ದರೆ ದೇಶ ಗೆಲ್ಲುತ್ತೇವೆ, ಬೂತ್ ಅಧ್ಯಕ್ಷರು ಪಕ್ಷದ ಜೀವಾಳ’- ಬಿ.ವೈ.ವಿಜಯೇಂದ್ರ

ಬೆಂಗಳೂರು : ಬೂತ್ ಗೆದ್ದರೆ ದೇಶ ಗೆಲ್ಲುತ್ತೇವೆ.ರಾಜ್ಯದ ಪ್ರತಿಯೊಂದು ಬೂತ್ ಅಧ್ಯಕ್ಷರು ಕೂಡ ಪಕ್ಷದ ಜೀವಾಳ. ಪಕ್ಷದ ಎಲ್ಲ ಬೂತ್‍ಗಳನ್ನು ಬಲಪಡಿಸಲು ಆದ್ಯತೆ ನೀಡುವುದಾಗಿ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

ಗಾಂಧಿನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಗಾಂಧಿನಗರ ಬೂತ್ 40ರ ಅಧ್ಯಕ್ಷ ಶಶೀಂದ್ರ ಅವರ ಮನೆಗೆ ಭೇಟಿ ಕೊಟ್ಟಿದ್ದೇನೆ. ದೀಪಾವಳಿ ಶುಭಾಶಯ ಕೋರಿದ್ದೇನೆ. ರಾಜ್ಯದಲ್ಲಿ 58,282 ಬೂತ್‍ಗಳು ಇವೆ. ಎಲ್ಲ ಬೂತ್‍ಗಳಲ್ಲಿ ಪಕ್ಷದ ಸಂಘಟನೆ ಬಲಪಡಿಸಲಾಗುವುದು ಎಂದು ತಿಳಿಸಿದರು.
ಬೂತ್ ಗೆದ್ದರೆ ದೇಶ ಗೆಲ್ಲುತ್ತೇವೆ. ಪ್ರತಿ ಬೂತ್ ಪ್ರಮುಖ ಮತ್ತು ಪಕ್ಷದ ಜೀವಾಳ ಎಂಬುದು ಹಿಂದಿನ ರಾಷ್ಟ್ರೀಯ ಅಧ್ಯಕ್ಷರು ಮತ್ತು ಇಂದಿನ ಕೇಂದ್ರ ಗೃಹ ಸಚಿವರು ಆದ ಅಮಿತ್ ಶಾ, ಇಂದಿನ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರ ಕಲ್ಪನೆ ಮತ್ತು ಚಿಂತನೆಯಾಗಿದೆ.

ಅವರ ಚಿಂತನೆಯಂತೆ ಬೂತ್ ಅಧ್ಯಕ್ಷರ ಮನೆಗೆ ಭೇಟಿ ಕೊಡುವ ಮೂಲಕ ಕಾರ್ಯಾರಂಭ ಮಾಡಿದ್ದೇನೆ. ಇಡೀ ರಾಜ್ಯದಲ್ಲಿರುವ ಎಲ್ಲ 58 ಸಾವಿರಕ್ಕೂ ಹೆಚ್ಚು ಬೂತ್‍ಗಳಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸಲು ಹೆಜ್ಜೆ ಇಡುವುದಾಗಿ ತಿಳಿಸಿದರು.

ಪಕ್ಷದ ರಾಷ್ಟ್ರೀಯ ನಾಯಕರು ಬೂತ್ ಅಧ್ಯಕ್ಷರಾಗಿ ಈ ಮಟ್ಟಕ್ಕೆ ಬೆಳೆದು ಬಂದಿದ್ದಾರೆ. ಬಿಜೆಪಿ, ರಾಷ್ಟ್ರೀಯ ಅಧ್ಯಕ್ಷರಂತೆ ಬೂತ್ ಅಧ್ಯಕ್ಷರನ್ನೂ ಗೌರವದಿಂದ ಕಾಣುತ್ತದೆ. ಇದೇ ಬಿಜೆಪಿಯ ವಿಶೇಷತೆ ಎಂದು ತಿಳಿಸಿದರು.

ಬಿಜೆಪಿ ಕಾರ್ಯಕರ್ತರು ಹೋರಾಟದಿಂದ ಹಿಂದೆ ಸರಿದ ಉದಾಹರಣೆಗಳಿಲ್ಲ. ನಮ್ಮ ಕಾರ್ಯಕರ್ತರ ರಕ್ತದ ಕಣಕಣದಲ್ಲೂ ಹೋರಾಟದ ಗುಣವಿದೆ. ಕಾಂಗ್ರೆಸ್ ಅಬ್ಬರವನ್ನು ಮೀರಿ ನಮ್ಮ ಪಕ್ಷದ ಕಾರ್ಯಕರ್ತರು ಸಂಘಟನೆ ಮಾಡುತ್ತಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡಲಿದ್ದೇವೆ ಎಂದು ವಿಶ್ವಾಸದಿಂದ ನುಡಿದರು.

ಕಾಂಗ್ರೆಸ್ ಸರ್ಕಾರದಿಂದ ಬಿಜೆಪಿ ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮ ಯಾವುದೇ ಕಾರ್ಯಕರ್ತರು ಹೋರಾಟಕ್ಕೆ ಹೆದರಿ ಕೂರುವವರಲ್ಲ. ಕಾಂಗ್ರೆಸ್ ಪಕ್ಷದವರು ಏನು ಮಾಡುತ್ತಾರೋ ಮಾಡಲಿ. ಮುಂದೆ ಅವರಿಗೆ ನಾವೆಲ್ಲರೂ ತಕ್ಕ ಉತ್ತರ ಕೊಡುತ್ತೇವೆ ಎಂದು ಅವರು ಎಚ್ಚರಿಸಿದ್ದಾರೆ.ಈ ಸಂದರ್ಭದಲ್ಲಿ ಸಂಸದ ಪಿ.ಸಿ.ಮೋಹನ್, ಜಿಲ್ಲಾಧ್ಯಕ್ಷ ಮಂಜುನಾಥ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಇದ್ದರು.