Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ದಿಗೆ 1 ಸಾವಿರ ಕೋಟಿ ರೂ. ಅನುದಾನ -ಸಿದ್ದರಾಮಯ್ಯ

ಬೆಂಗಳೂರು: ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿರುವ ಕಾಲೋನಿಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸುವ ಸಲುವಾಗಿ ೧ ಸಾವಿರ ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರಿನಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ಹಾಗೂ ವಸತಿ ಇಲಾಖೆಯ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಸಿದ್ದರಾಮಯ್ಯ ಅವರು, ಈಗಗಾಲೇ ಅಲ್ಪಸಂಖ್ಯಾತರಿಗೆ ಸೌಲಭ್ಯ ಒದಗಿಸುವ ವಿವಿಧ ಯೋಜನೆಗಳಿಗೆ ಭಾರಿ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗಿರುವ ನಿಟ್ಟಿನಲ್ಲಿ ಮುಂದಿನ ವರ್ಷದ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು.

ಇನ್ನು ಪ್ರಸ್ತುತ ಸಾಲಿನಲ್ಲಿ ವಿವಿಧ ವಸತಿ ಯೋಜನೆಗಳಡಿ ಆರಂಭಿಸಿರುವ 3 ಲಕ್ಷ ಮನೆಗಳಲ್ಲಿ 1.31 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಂಡಿದೆ. ಇದರೊಂದಿಗೆ ರಾಜೀವ್‌ ಗಾಂಧಿ ಗ್ರಾಮೀಣ ವಸತಿ ನಿಗಮದ ವತಿಯಿಂದ ಪ್ರಧಾನ ಮಂತ್ರಿ ಆವಾಸ್‌ ವಸತಿ ಯೋಜನೆಯಡಿ ಕೈಗೆತ್ತಿಕೊಂಡಿರುವ 52,189 ಮನೆಗಳ ಫಲಾನುಭವಿಗಳ ವಂತಿಗೆ 3 ಲಕ್ಷ ರೂ. ಸರ್ಕಾರದಿಂದಲೇ ಭರಿಸಲು ಮುಖ್ಯಮಂತ್ರಿಯವರು ಒಪ್ಪಿಗೆ ಸೂಚಿಸಿದ್ದಾರೆ.

ಇನ್ನು ಬಾಕಿ ಉಳಿದಿರುವ 1.69 ಲಕ್ಷ ಮನೆಗಳ ನಿರ್ಮಾಣವನ್ನು 2024ರ ಮಾರ್ಚ್‌ ಅಂತ್ಯದೊಳಗೆ ಪೂರ್ಣಗೊಳಿಸಬೇಕು. ಕೊಳೆಗೇರಿ ಅಭಿವೃದ್ಧಿ ಮಂಡಳಿ ವಸತಿ ಯೋಜನೆಯಡಿ ಈ ಅವಧಿಯಲ್ಲಿ 25 ಸಾವಿರ ಮನೆಗಳ ನಿರ್ಮಾಣ ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚನೆ ನೀಡಿದರು