Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಅಯೋಧ್ಯೆ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಚಾಲನೆ

ಅಯೋಧ್ಯೆ: ಪ್ರಧಾನಿ ಮೋದಿ ಅವರು ಅಯೋಧ್ಯೆ ರೈಲು ನಿಲ್ದಾಣ ಉದ್ಘಾಟಿಸಿದ ಬೆನ್ನಲ್ಲೇ ಇದೀಗ ಅಯೋಧ್ಯೆಯ ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲೋಕಾರ್ಪಣೆಗೊಳಿಸಿದ್ದಾರೆ. ಈ ವೇಳೆ ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಅತ್ಯಾಧುನಿಕ ವಿಮಾನ ನಿಲ್ದಾಣದ 1ನೇ ಹಂತವನ್ನು 1,450 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡವು 6,500 ಚದರ ಮೀಟರ್ ವಿಸ್ತೀರ್ಣ ಹೊಂದಿದ್ದು, ವಾರ್ಷಿಕವಾಗಿ ಸುಮಾರು 10 ಲಕ್ಷ ಪ್ರಯಾಣಿಕರಿಗೆ ಸೇವೆ ಸಲ್ಲಿಸಲು ಸುಸಜ್ಜಿತವಾಗಿದೆ. ಟರ್ಮಿನಲ್ ಕಟ್ಟಡದ ಮುಂಭಾಗವು ಅಯೋಧ್ಯೆ ಶ್ರೀ ರಾಮ ಮಂದಿರದ ದೇವಾಲಯದ ವಾಸ್ತು ಶಿಲ್ಪವನ್ನು ಚಿತ್ರಿಸುತ್ತದೆ. ಟರ್ಮಿನಲ್ ಕಟ್ಟಡದ ಒಳಭಾಗದಲ್ಲಿ ಭಗವಾನ್ ಶ್ರೀರಾಮನ ಜೀವನ ಚಿತ್ರಿಸುವ ಸ್ಥಳೀಯ ಕಲೆ, ವರ್ಣಚಿತ್ರಗಳು ಮತ್ತು ಭಿತ್ತಿ ಚಿತ್ರಗಳಿಂದ ಅಲಂಕರಿಸಲಾಗಿದೆ.

ಅಯೋಧ್ಯೆ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡವು ಇನ್ಸುಲೇಟೆಡ್ ರೂಫಿಂಗ್ ಸಿಸ್ಟಮ್, ಎಲ್ಇಡಿ ಲೈಟಿಂಗ್, ಮಳೆ ನೀರು ಕೊಯ್ಲು, ಕಾರಂಜಿಗಳು, ನೀರು ಸಂಸ್ಕರಣಾ ಘಟಕ, ಒಳಚರಂಡಿ ಸಂಸ್ಕರಣಾ ಘಟಕ, ಸೌರ ವಿದ್ಯುತ್ ಸ್ಥಾವರ ಮತ್ತು ಇತರ ಒಳಗೊಂಡ ಹಲವು ವೈಶಿಷ್ಟ್ಯಗಳನ್ನು ಒದಗಿಸಲಾಗಿದೆ. 5 ಸ್ಟಾರ್ ರೇಟಿಂಗ್‌ ಗೆ ಅನುಗುಣವಾಗಿ ಈ ವೈಶಿಷ್ಟ್ಯಗಳನ್ನು ರೂಪಿಸಲಾಗಿದೆ. ವಿಮಾನ ನಿಲ್ದಾಣವು ಪ್ರವಾಸೋದ್ಯಮ, ವ್ಯಾಪಾರ ಚಟುವಟಿಕೆಗಳು ಮತ್ತು ಉದ್ಯೋಗಾವಕಾಶಗಳಲ್ಲಿ ಉತ್ತೇಜನಕ್ಕೆ ಕಾರಣವಾಗಿದೆ.