Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ 15ನೇ ಬಜೆಟ್‌ ಮಂಡನೆ ಮಾಡಿದ್ದು, ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ಬೆಂಬಲ ನೀಡುವ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ. ನೀಡಲಾಗುತ್ತಿದೆ. ಕುಟುಂಬ ದತ್ತಾಂಶದನ್ವಯ 1.33 ಕೋಟಿ APL, BPL, AAY ಪಡಿತರ ಚೀಟಿ ಹೊಂದಿರುವ ಯಜಮಾನಿ ಮಹಿಳೆಯರನ್ನು ಅರ್ಹ ಫಲಾನುಭವಿಗಳೆಂದು ಗುರುತಿಸಲಾಗಿದೆ. ಜನವರಿ ಅಂತ್ಯದವರೆಗೆ 1.17 ಕೋಟಿ ಮಹಿಳೆಯರು ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ಈವರೆಗೆ 11,726 ಕೋಟಿ ರೂ.ಗಳನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ ಎಂದಿದ್ದಾರೆ.

2024-25ನೇ ಸಾಲಿನಲ್ಲಿ 28,608 ಕೋಟಿ ರೂ. ಒದಗಿಸಲಾಗಿದೆ. ಇದರಿಂದ ಕುಟುಂಬ ನಿರ್ವಹಣೆಯ ಜೊತೆಗೆ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಮಹಿಳೆಯರಿಗೆ ಈ ಯೋಜನೆ ಅವಕಾಶ ಕಲ್ಪಿಸಿದೆ ಎಂದರು.

ಇನ್ನು ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಗಳನ್ನು ಒದಗಿಸಲಾಗುವುದು. ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್ ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಒದಗಿಸಲಾಗುವುದು. ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತುಗಳನ್ನು ನೀಡಲಾಗುವುದು ಎಂದಿದ್ದಾರೆ.

ಆರೋಗ್ಯ ಇಲಾಖೆಯೊಂದಿಗೆ ಸಮನ್ವಯಿಸಿ ಎಲ್ಲಾ ತಾಲ್ಲೂಕುಗಳಲ್ಲಿ ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಎರಡು Cataract ಶಸ್ತ್ರಚಿಕಿತ್ಸೆ ಶಿಬಿರಗಳನ್ನು ಆಯೋಜಿಸಲಾಗುವುದು. ನಿರಾಶ್ರಿತ ಬೌದ್ಧಿಕ ವಿಕಲಚೇತನರ ಆರೈಕೆ ಮತ್ತು ಸಂರಕ್ಷಣೆಗಾಗಿ 4 ಅನುಪಾಲನಾ ಗೃಹಗಳನ್ನು ಎರಡು ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು ಎಂದರು.

ಇನ್ನು ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಒದಗಿಸಲು ಇನ್ನೂ ಬಾಕಿಯಿರುವ 1,500 ವಿಶೇಷಚೇತನರಿಗೆ 2024-25ನೇ ಸಾಲಿನಲ್ಲಿ ದ್ವಿಚಕ್ರ ವಾಹನಗಳನ್ನು ವಿತರಿಸಲಾಗುವುದು.

ಲಿಂಗತ್ವ ಅಲ್ಪಸಂಖ್ಯಾತರ ಬದುಕನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಮೈತ್ರಿ ಯೋಜನೆಯಡಿ ನೀಡುವ ಮಾಸಾಶನವನ್ನು 800 ರೂ.ಗಳಿಂದ 1,200 ರೂ.ಗಳಿಗೆ ಹೆಚ್ಚಿಸಲಾಗುವುದು. ಜೊತೆಗೆ ಗುರುತಿಸುವಿಕೆ ಹಾಗೂ ಗುರುತಿನ ಚೀಟಿ ವಿತರಣೆಯ ಪ್ರಕ್ರಿಯೆಗಳನ್ನು ಸರಳಗೊಳಿಸಲಾಗುವುದು ಎಂದರು.