‘ಕಡಿಮೆ ಸಮಯದಲ್ಲಿಯೇ ಜನರ ವಿಶ್ವಾಸ ಕಳೆದುಕೊಂಡ ಕಾಂಗ್ರೆಸ್’ – ವಿಜಯೇಂದ್ರ

ತುಮಕೂರು: ಬಿಜೆಪಿಯ ನೂತನ ರಾಜ್ಯಾದ್ಯಕ್ಷ ಬಿ.ವೈ ವಿಜಯೇಂದ್ರ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದರು. ಈಗಿನ ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರ ಕಡಿಮೆ ಸಮಯದಲ್ಲಿಯೇ ಜನರ ವಿಶ್ವಾಸವನ್ನು ಕಳೆದುಕೊಂಡಿದೆ ಎಂದು ಹೇಳಿದರು.

ತುಮಕೂರು ವಿಧಾನಸಭಾ ಕ್ಷೇತ್ರದ ಶಕ್ತಿಸೌಧ ಕಚೇರಿಗೆ ರವಿವಾರ ಭೇಟಿ ನೀಡಿ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ 6 ತಿಂಗಳು ಕಳೆದ ಬಳಿಕ ರಾಜ್ಯ ಸರಕಾರದ ವೈಫ‌ಲ್ಯಗಳ ವಿರುದ್ಧ ಹೋರಾಟ ಮಾಡಬೇಕು ಎಂದುಕೊಂಡಿದ್ದೆವು. ಆದರೆ ಕಾಂಗೆಸ್ ಸರ್ಕಾರ ನಾವು ಅಂದುಕೊಂಡಿದ್ದಕ್ಕಿಂತ ಮುಂಚಿತವೇ ಜನರ ವಿಶ್ವಾಸದಿಂದ ದೂರವಾಗಿದೆ ಎಂದು ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದರು.

ನಗರದ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ವಿಜಯೇಂದ್ರ ಅವರು ಲಿಂ. ಡಾ| ಶ್ರೀಶಿವಕುಮಾರ ಸ್ವಾಮೀಜಿಯ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಆಶೀರ್ವಾದವನ್ನೂ ಪಡೆದರು.

ಈ ವೇಳೆ ಸುದ್ದಿಗಾರರ ಜತೆ ಮಾತನಾಡಿ, ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಸದಾನಂದ ಗೌಡ, ಮಾಜಿ ಡಿಸಿಎಂಗಳಾದ ಕೆ.ಎಸ್‌.ಈಶ್ವರಪ್ಪ, ಗೋವಿಂದ ಕಾರಜೋಳ, ಅಶೋಕ್‌, ಬಸನಗೌಡ ಪಾಟೀಲ್‌ ಯತ್ನಾಳ್‌, ವಿ.ಸೋಮಣ್ಣ ಸಹಿತ ಎಲ್ಲ ಹಿರಿಯರ ಸಮ್ಮುಖದಲ್ಲಿ ರಾಜ್ಯಾಧ್ಯಕ್ಷ ಜವಾಬ್ದಾರಿ ಸ್ವೀಕಾರ ಮಾಡುವುದಾಗಿ ಹಾಗೂ ಈವರೆಗೆ ರಾಜ್ಯಾಧ್ಯಕ್ಷರಾಗಿದ್ದ ನಳಿನ್‌ಕುಮಾರ್‌ ಕಟೀಲು ಯಶಸ್ವಿಯಾಗಿ ಪಕ್ಷವನ್ನು ಕಟ್ಟಿದ್ದಾರೆ. ಎಲ್ಲ ಹಿರಿಯ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆದು ಅವರ ಸಲಹೆ, ಸೂಚನೆಗಳೊಂದಿಗೆ ಪಕ್ಷವನ್ನು ಸಂಘಟಿಸುವ ಕೆಲಸ ಮಾಡುತ್ತೇನೆ ಎಂದರು.

 

Comments (0)
Add Comment