ಕೆಂಪೇಗೌಡರ ಕುರಿತು ಅವಹೇಳನಕಾರಿ ಪೋಸ್ಟ್- ನಟ ಚೇತನ್‌ ವಿರುದ್ಧ ಎನ್‌ಸಿಆರ್‌ ದಾಖಲು

ಬೆಂಗಳೂರು: ಸೋಶಿಯಲ್‌ ಮೀಡಿಯಾ ಪೋಸ್ಟ್‌ಗಳ ಮೂಲಕ ವಿವಾದಾತ್ಮಕ ಹೇಳಿಕೆ ನೀಡುವ ನಟ ಚೇತನ್‌ ಮತ್ತೊಂದು ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ. ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಶೇಷಾದ್ರಿಪುರಂ ಪೊಲೀಸರು ಎನ್‌ಸಿಆರ್‌ ದಾಖಲಿಸಿದ್ದಾರೆ.

ಇಬ್ಬರು ಯೋಧರ ಕಥೆ ಎಂದು ಕೆಂಪೇಗೌಡ ಹಾಗೂ ಟಿಪ್ಪು ಸುಲ್ತಾನ್ ಬಗ್ಗೆ ಬರಹವೊಂದನ್ನು ಚೇತನ್‌ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕೆಂಪೇಗೌಡ ಊಳಿಗಮಾನ್ಯ ಜಾತಿ ಲಾಭಿಗಳ ಪ್ರಭಾವದಿಂದಾಗಿ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ. ಟಿಪ್ಪು ಸುಲ್ತಾನ್ ಒಬ್ಬ ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ, ಅವರ ಜನ್ಮವು ಮುಸ್ಲಿಮರಾಗಿ ಅವರ ಇಂದಿನ ಮಾನ್ಯತೆಗೆ ಅಡ್ಡಿಯಾಗಿದೆ. ದುರದೃಷ್ಟವಶಾತ್, ಒಬ್ಬ ವ್ಯಕ್ತಿಯು ಹುಟ್ಟಿದ ಸಮುದಾಯಕ್ಕೆ ಅವನ/ಅವಳ ಸಾಮಾಜಿಕ ಕೊಡುಗೆಗಳಿಗಿಂತ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ ಎಂದು ಬರೆದುಕೊಂಡಿದ್ದಾರೆ. ಈ ಬರಹದ ಮೇಲೆ ವಕೀಲ ಆರ್.ಎಲ್.ಎನ್ ಮೂರ್ತಿ ಶೇಷಾದ್ರಿಪುರಂ ಠಾಣೆಗೆ ದೂರು ನೀಡಿದ್ದಾರೆ.

ತಾನೊಬ್ಬ ನಟ ಎಂದು ಹೇಳಿಕೊಳ್ಳುವ ಚೇತನ್‌ ಅಹಿಂಸಾ ಅವರು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಹಾಕಿ ನಾಡಪ್ರಭುಗಳಿಗೆ ಅಗೌರವ ತೋರಿದ್ದಾರೆ. ಅವರ ವಿರುದ್ಧ ಸಾಕಷ್ಟು ಪ್ರಕರಣಗಳು ದಾಖಲಾಗಿವೆ. ಈ ದೇಶದ ಪ್ರಜೆಯಾಗಿರದ ಚೇತನ್‌ ಗೌರವಾನ್ವಿತ ಕೆಂಪೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಮಾಡಿರುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಆದ್ದರಿಂದ ಕೂಡಲೇ ಅವರನ್ನು ವಿಚಾರಣೆಗೆ ಒಳಪಡಿಸಿ, ಸೋಶಿಯಲ್‌ ಮೀಡಿಯಾದಲ್ಲಿ ಹಾಕಿರುವ ಪೋಸ್ಟ್‌ಗಳನ್ನು ತೆಗೆಸಬೇಕು, ಚೇತನ್‌ ಪಾಸ್‌ಪೋರ್ಟ್‌ ರದ್ದು ಮಾಡಿ ಅವರನ್ನ ಮಾತೃದೇಶಕ್ಕೆ ಗಡಿಪಾರು ಮಾಡಬೇಕು ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್‌ ಅಶ್ವಥ್‌ ನಾರಾಯಣ್‌ ಅವರೂ ಸಹ ಚೇತನ್‌ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಚೇತನ್‌ ಎನ್ನುವ ವ್ಯಕ್ತಿಯು ನಾಡಪ್ರಭು ಕೆಂಪೇಗೌಡರ ಕುರಿತು ಕೀಳು ಅಭಿರುಚಿಯ ಪದ ಬಳಕೆ ಮಾಡಿರುವುದನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಿಎಂ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ. ಯಾವುದೇ ಒಂದು ಸಮುದಾಯದ ಭಾವನೆಗೆ ಧಕ್ಕೆ ತಂದು ಸಮಾಜದ ಸ್ವಾಸ್ಥ್ಯ ಹಾಳು ಮಾಡುವವರನ್ನು ನಿಯಂತ್ರಿಸಲು ಕಾಂಗ್ರೆಸ್‌ ಸರ್ಕಾರ ವಿಫಲವಾಗಿದೆ ಎನ್ನುವುದಕ್ಕೆ ಇದೊಂದು ಸ್ಪಷ್ಟ ನಿದರ್ಶನ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Comments (0)
Add Comment