ಜಯಲಲಿತಾ ಆಭರಣ ಹಸ್ತಾಂತರಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್‌

ಬೆಂಗಳೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರು ಅಕ್ರಮವಾಗಿ ಗಳಿಸಿದ್ದರು ಎನ್ನಲಾದ,
ಸದ್ಯ ಬೆಂಗಳೂರಿನ ವಿಶೇಷ ನ್ಯಾಯಾಲಯದ ಸುಪರ್ದಿಯಲ್ಲಿರುವ ಚಿನ್ನಾಭರಣಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

ಈ ವಿಚಾರವಾಗಿ ಜಯಲಲಿತಾ ಪುತ್ರಿ ಜೆ.ದೀಪಾ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿತು. ಅಲ್ಲದೆ ಪ್ರಕರಣ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮಾ.26ಕ್ಕೆ ಮುಂದೂಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಜಯಲಲಿತಾ ವಿರುದ್ಧದ ಭ್ರಷ್ಟಾಚಾರ ಆರೋಪ ಸಂಬಂಧ ಸುಪ್ರೀಂ ಕೋರ್ಟ್‌ನಿಂದ ತೀರ್ಪು ಬರುವ ಮುನ್ನವೇ ಅವರು ಮೃತರಾಗಿದ್ದರು. ಆದ ಕಾರಣ ಅವರನ್ನು ಆರೋಪ ಮುಕ್ತರು ಎಂದು ಸುಪ್ರಿಂ ತೀರ್ಪು ನೀಡಿದೆ. ಆದ್ದರಿಂದ ಅರ್ಜಿದಾರರು ಜಯಲಲಿತಾ ಅವರ ಕಾನೂನುಬದ್ಧ ವಾರಸುದಾರರಾಗಿದ್ದು ಅವರ ಎಲ್ಲ ಚಿನ್ನಾಭರಣಗಳನ್ನು ಅರ್ಜಿದಾರರಿಗೆ ಹಸ್ತಾಂತರ ಮಾಡಬೇಕು ಎಂದು ಕೋರಿದರು.

ಈ ವಾದ ದಾಖಲಿಸಿಕೊಂಡ ನ್ಯಾಯಪೀಠ, ನಗರದ ವಿಶೇಷ ನ್ಯಾಯಾಲಯದಿಂದ ತಮಿಳುನಾಡು ಸರ್ಕಾರಕ್ಕೆ ಮಾ.6 ಆಗಬೇಕಾಗಿದ್ದ ಚಿನ್ನಾಭರಣಗಳ ಹಸ್ತಾಂತರ ಪ್ರಕ್ರಿಯೆಗೆ ತಡೆ ನೀಡಿ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿ, ವಿಚಾರಣೆಯನ್ನು ಮುಂದೂಡಿದೆ.

Comments (0)
Add Comment