ಭಾರತಿಯ ಜನತಾ ಪಕ್ಷದ ಧೀಮಂತ ರಾಜಕೀಯ ನಾಯಕ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಕರ್ನಾಟಕ ಬಿಜೆಪಿಯ ಹಿರಿಯ ಮುಖಂಡ ಎಚ್.ಎನ್. ಅನಂತಕುಮಾರ್ (59) ಅವರು ಕ್ಯಾನ್ಸರ್ ಖಾಯಿಲೆಗೆ ತುತ್ತಾಗಿ ನಿಧನರಾಗಿದ್ದಾರೆ. 1959 ಜುಲೈ 22ರಂದು ಬೆಂಗಳೂರಿನಲ್ಲಿ ಜನಿಸಿದ ಅನಂತ ಕುಮಾರ್  ಹುಬ್ಬಳ್ಳಿಯ ಕೆಎಸ್ ಕಲಾ ಕಾಲೇಜಿನಲ್ಲಿ ಬಿ.ಎ ಪದವಿ ಪಡೆದರು. ನಂತರ ಜೆಎಸ್‌ಎಸ್ ಕಾನೂನು ಕಾಲೇಜಿನಲ್ಲಿ ಎಲ್‌ಎಲ್ ಬಿ ಪದವಿ ಪಡೆದಿದ್ದರು. ವಿದ್ಯಾರ್ಥಿಯಾಗಿದ್ದಾಗಲೇ ರಾಷ್ಟ್ರೀಯ ಸ್ವಯಂ ಸೇವಾ ಸಂಘದಲ್ಲಿ ಗುರುತಿಸಿಕೊಂಡಿದ್ದ ಅನಂತ ಕುಮಾರ್ ಅವರು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತಿನ ಸದಸ್ಯರಾಗಿದ್ದರು. ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಸರಕಾರದ ವಿರುದ್ಧ ಪ್ರತಿಭಟನೆ ಮಾಡಿ ಜೈಲುವಾಸ ಅನುಭವಿಸಿದ್ದರು.

ನಂತರ ಎಭಿವಿಪಿಯ ರಾಜ್ಯ ಘಟಕದ ಕಾರ್ಯದರ್ಶಿಯಾಗಿ ಆಯ್ಕೆಯಾದ ಇವರು ನಂತರ 1985ರಲ್ಲಿ ರಾಷ್ಟ್ರೀಯ ಕಾರ್ಯದರ್ಶಿಯಾದರು. ನಂತರ ಭಾರತೀಯ ಜನತಾ ಪಕ್ಷವನ್ನು ಸೇರಿ ಯುವ ಮೋರ್ಚಾದ ರಾಜ್ಯಾಧ್ಯಕ್ಷರಾದರು. 1996ರಲ್ಲಿ ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯದರ್ಶಿಯಾಗಿ ನೇಮಕವಾದರು.1996ರಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾಗಿದ್ದ ಅನಂತ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಚಿವ ಸಂಪುಟದಲ್ಲಿ ಎರಡು ಪ್ರಮುಖ ಖಾತೆಗಳ ಜವಾಬ್ದಾರಿ ವಹಿಸಿದ್ದರು.

2014ರಲ್ಲಿ ರಸಗೊಬ್ಬರ ಖಾತೆ ಜವಾಬ್ದಾರಿ ವಹಿಸಿಕೊಂಡಿದ್ದ ಅನಂತ ಕುಮಾರ್, 2016ರ ಜುಲೈನಿಂದ ಸಂಸದೀಯ ವ್ಯವಹಾರಗಳ ಖಾತೆಯ ಜವಾಬ್ದಾರಿಯನ್ನು ಹೊತ್ತಿದ್ದರು. ಇದಕ್ಕೂ ಮುನ್ನ ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದಲ್ಲಿ ನಾಗರೀಕ ವಿಮಾನಯಾನ ಸಚಿವರಾಗುವ ಮೂಲಕ ಆ ಸಚಿವ ಸಂಪುಟದ ಅತ್ಯಂತ ಕಿರಿಯ ಸಚಿವರಾಗಿದ್ದರು.ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡುವ ಅವಕಾಶ ಸಿಗುವುದೇ ದೊಡ್ಡ ಹೆಮ್ಮೆ. ಹೀಗಿರುವಾಗ ಸಂಸದ ಅನಂತ್ ಕುಮಾರ್ ಅವರು ವಿಶ್ವಸಂಸ್ಥೆಯಲ್ಲಿ ಮೊಟ್ಟ ಮೊದಲ ಬಾರಿಗೆ ಕನ್ನಡದಲ್ಲಿ ಮಾತನಾಡುವ ಮೂಲಕ ಇತಿಹಾಸ ನಿರ್ಮಿಸಿದ್ದರು.

2015ರ ಅಕ್ಟೋಬರ್​ 15ರಂದು ವಿಶ್ವಸಂಸ್ಥೆಯ 67ನೇ ಸಾಮಾನ್ಯ ಸಭೆಯಲ್ಲಿ ಪಾಲ್ಗೊಂಡ ವೇಳೆ ಅನಂತ್ ಕುಮಾರ್ ಅವರು ಕನ್ನಡದಲ್ಲಿ ಭಾಷಣ ಆರಂಭಿಸಿದ್ದರು. ವಿಶ್ವಸಂಸ್ಥೆಯಲ್ಲಿ ಅನಂತ್​ ಕುಮಾರ್​​ ಅವರು ಕನ್ನಡದಲ್ಲಿ ಸ್ವಾಗತ ಕೋರಿದ್ದು ಕನ್ನಡಿಗರ ಪಾಲಿಗೆ ಹೆಮ್ಮೆ ತಂದಿತ್ತು.
‘ಸನ್ಮಾನ್ಯ ಅಧ್ಯಕ್ಷರೇ ಮತ್ತು ವಿಶ್ವದ ನನ್ನ ಪ್ರೀತಿಯ ಸಹೋದರ, ಸಹೋದರಿಯರೇ ನಿಮ್ಮೆಲ್ಲರಿಗೂ ನನ್ನ ಮುಂಜಾನೆಯ ಶುಭಾಶಯಗಳು  ಎಂದು ಅನಂತ್​​​ಕುಮಾರ್​​ ಅವರು ಕನ್ನಡದಲ್ಲಿ  ಭಾಷಣ ಆರಂಭಿಸಿದ್ದರು.

ವಿದೇಶಾಂಗ ವ್ಯವಹಾರಗಳ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಅನಂತ್​ ಕುಮಾರ್​, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಕನ್ನಡದಲ್ಲಿ ಭಾಷಣ ಆರಂಭಿಸುವ ಮೂಲಕ ಕನ್ನಡ ನಾಡು ನುಡಿಯ ಹಿರಿಮೆಯನ್ನು ಹೆಚ್ಚಿಸಿದ್ದರು.
ವಿಶ್ವ ಶಾಂತಿ, ಮಾನವ ಹಕ್ಕುಗಳ ರಕ್ಷಣೆ ಹಾಗೂ ಭಯೋತ್ಪಾದನೆ ನಿಗ್ರಹಕ್ಕೆ ಭಾರತ ಸಂಕಲ್ಪ ತೊಟ್ಟಿದೆ. ಜಾಗತಿಕ ಮಟ್ಟದ ಅಪರಾಧ ಚಟುವಟಿಕೆಗಳನ್ನು ತಡೆಯುವಲ್ಲಿ ಮತ್ತು ನಿಯಂತ್ರಿಸುವಲ್ಲಿ ವಿಶ್ವಸಂಸ್ಥೆಯ ನ್ಯಾಯಮಂಡಳಿಗಳು ನಡೆಸುತ್ತಿರುವ ಹೋರಾಟ ಶ್ಲಾಘನೀಯ ಎಂದು ಅನಂತ್ ಕುಮಾರ್ ಹೇಳಿದ್ದರು.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here