ಮುರುಘಾ ಮಠಕ್ಕೆ ಆಡಳಿತಾಧಿಕಾರಿಯಾಗಿ ಜಿಲ್ಲಾ ಪ್ರಧಾನ ನ್ಯಾಯಾಧೀಶರ ನೇಮಕ.!
ಬೆಂಗಳೂರು: ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ‘ಕ್ಕೆ ತಾತ್ಕಾಲಿಕ ಆಡಳಿತಾಧಿಕಾರಿಯನ್ನಾಗಿ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ನೇಮಕ ಮಾಡಿ ಹೈಕೋರ್ಟ್ ಆದೇಶಿಸಿದೆ.
ಈ ಕುರಿತ ಮೇಲ್ಮನವಿಯನ್ನು ಸೋಮವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠವು, ‘ಚಿತ್ರದುರ್ಗ ಜಿಲ್ಲಾ ಪ್ರಧಾನ ನ್ಯಾಯಾಧೀಶರು ಮಂಗಳವಾರ (ಜುಲೈ 4) ಬೆಳಗ್ಗೆ 11 ಗಂಟೆಗೆ ಮಠದ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಬೇಕು‘ ಎಂದು ನಿರ್ದೇಶಿಸಿದೆ.
ಜಿಲ್ಲಾ ನ್ಯಾಯಾಧೀಶರು ಯಾವುದೇ ಪ್ರಮುಖ ನೀತಿ ನಿರ್ಧಾರ ಕೈಗೊಳ್ಳಬಾರದು. ಮಠ ಮತ್ತು ವಿದ್ಯಾಪೀಠದ ದೈನಂದಿನ ವ್ಯವಹಾರಗಳನ್ನು ಮಾತ್ರವೇ ನಿಭಾಯಿಸಬೇಕು. ಈ ನಿಟ್ಟಿನಲ್ಲಿ ಯಾವುದಾದರೂ ನೆರವು ಬೇಕಾದಲ್ಲಿ ಚಿತ್ರದುರ್ಗ ಜಿಲ್ಲಾಧಿಕಾರಿಯನ್ನು ಲಿಖಿತವಾಗಿ ಕೋರಬಹುದು. ಅದರನ್ವಯ ಜಿಲ್ಲಾಧಿಕಾರಿ ತಕ್ಷಣವೇ ಅಗತ್ಯ ನೆರವು ಕಲ್ಪಿಸಬೇಕು ಎಂದು ನಿರ್ದೇಶಿಸಿದೆ. ಮೇಲ್ಮನವಿಗೆ ಸಂಬಂಧಿಸಿದಂತೆ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಇದೇ 18ಕ್ಕೆ ಮುಂದೂಡಿದೆ.