ಬೆಂಗಳೂರು: ತುಮಕೂರು ಗ್ರಾಮಾಂತರ ಕ್ಷೇತ್ರದ ಗೌರಿಶಂಕರ್ ಮತ್ತು ದಾಸರಹಳ್ಳಿ ಮಂಜುನಾಥ್ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಮೂಲಕ ಜಾತ್ಯತೀತ ಮತ್ತು ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.
KPCC ಕಚೇರಿಯಲ್ಲಿ ನಡೆದ ವಿವಿಧ ಪಕ್ಷದ ನಾಯಕರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಇಬ್ಬರನ್ನೂ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದರು.
ನಾವಿದ್ದಾಗ ಜನತಾದಳ ಸೆಕ್ಯುಲರ್ ಆಗಿತ್ತು. ಈಗ “ಎಸ್” ಕಿತ್ತೋಗಿ ಕೇವಲ ಜನತಾದಳ ಆಗಿ ಉಳಿದಿದೆ. ಹಿಂದೆಯೂ ಬಿಜೆಪಿ ಜತೆ ಕೈ ಜೋಡಿಸಿದ್ದ ಕಾರಣಕ್ಕೆ ಜನತಾ ಪರಿವಾರದಲ್ಕಿ ಸೆಕ್ಯುಲರ್ ಸಿದ್ದಾಂತದವರೆಲ್ಲಾ ಪ್ರತ್ಯೇಕವಾಗಿ ಉಳಿದೆವು. ಈಗ ಜೆಡಿಎಸ್ ಮತ್ತೆ ಬಿಜೆಪಿ ಜತೆ ಬೆರೆಯುತ್ತಿದೆ. ನಾನು ಈ ಜೆಡಿಎಸ್ ಅನ್ನು ಬಿಜೆಪಿಯ “ಬಿ” ಟೀಮ್ ಅಂದಿದ್ದಕ್ಕೆ ಸಿಟ್ಟಾಗಿದ್ದರು. ಅಂದು ನಾನು ಹೇಳಿದ್ದನ್ನು ಇಂದು ಅವರೇ ಸಾಬೀತುಪಡಿಸಿದ್ದಾರೆ ಎಂದು ವಿವರಿಸಿದರು.
ಜೆಡಿಎಸ್ ಈಗ ತನ್ನ ಸ್ವರೂಪದಲ್ಲಿ ಜನಸಮುದಾಯದ ರಾಜಕೀಯ ಪಕ್ಷ ಆಗಿ ಉಳಿದಿಲ್ಲ. ಕೇವಲ ಕುಟುಂಬದ ಪಕ್ಷ ಆಗಿಯಷ್ಟೆ ಸೀಮಿತವಾಗಿದೆ. ಜೆಡಿಎಸ್ ನ ಡಬ್ಬಲ್ ಗೇಮ್ ಅನ್ನು ಸರಿಯಾಗಿ ಅರ್ಥ ಮಾಡಿಕೊಂಡಿರುವ ಗೌರಿಶಂಕರ್ ಮತ್ತು ಮಂಜುನಾಥ್ ಜತೆಗೆ ಇನ್ನೂ ಬಹಳ ಮಂದಿ ಕಾಂಗ್ರೆಸ್ ಸೇರುತ್ತಿದ್ದಾರೆ. ಆ ಮೂಲಕ ತಮ್ಮ ರಾಜಕೀಯ ಜೀವನವನ್ನು ಭದ್ರ ಮಾಡಿಕೊಳ್ಳುತ್ತಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.
ನಿಮಗೆ ನಾಚಿಕೆ ಆಗತ್ತೋ ಇಲ್ವೋ ಪ್ರಧಾನಿ ಮೋದಿಯವರೇ?
ನಾವು ಗ್ಯಾರಂಟಿ ಕಾರ್ಯಕ್ರಮಗಳನ್ನು ಕೊಟ್ಟಾಗ ಅವನ್ನು ಟೀಕಿಸಿದ್ದ ಪ್ರಧಾನಿಗಳು ಈಗ “ಮೋದಿ ಗ್ಯಾರಂಟಿ” ಹೆಸರಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ ಎಂದು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು ಪ್ರಧಾನಿ ಮೋದಿಯವರೇ, ನಿಮಗೆ ನಾಚಿಕೆ ಆಗತ್ತೋ ಇಲ್ವೋ ಎಂದು ಪ್ರಶ್ನಿಸಿದರು.
ರಾಜ್ಯದ, ಕನ್ನಡ ನಾಡಿನ ಜನತೆಯ ಹಣ ಇರುವ ಸರ್ಕಾರದ ಕಾರ್ಯಕ್ರಮಗಳನ್ನು ಪ್ರಧಾನಿ ಮೋದಿಯವರು ತಮ್ಮ ಕಾರ್ಯಕ್ರಮ ಎಂದು ಬಿಂಬಿಸಿ ಪ್ರಚಾರ ಪಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ. ಇದಕ್ಕೆ ರಾಜ್ಯದ ಜನತೆಯ ಮತ್ತು ನಮ್ಮಗಳ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿದರು.
ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದು ಎಲ್ಲರನ್ನೂ ಸ್ವಾಗತಿಸಿದರು.
Disclaimer: This Story is auto-aggregated by a Syndicated Feed and has not been Created or Edited By City Big News Staff.