ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ವಿರುದ್ಧ ತಮ್ಮ ಅಸಮಾಧಾನವನ್ನು, ಆಕ್ರೋಶವನ್ನು ಸರಣಿ ಟ್ವೀಟ್ ಗಳನ್ನು ಮಾಡುವ ಮೂಲಕ ಹೊರ ಹಾಕಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಅವರು ಸರಣಿ ಟ್ವೀಟ್ ಗಳನ್ನು ಮಾಡುವ ಮೂಲಕ ತನ್ನನ್ನು ಕೊಲೆ ಮಾಡುವ ತಂತ್ರಗಳು ನಡೆಯುತ್ತಿವೆಯಂತೆ ಎಂದು ಹೇಳಿದ್ದಾರೆ. ಅಲ್ಲದೆ ತನ್ನನ್ನು ಅಪಮಾನ ಮಾಡುತ್ತಿರುವ ಬಿಜೆಪಿಗೆ ಎಚ್ಚರ ಎನ್ನುವ ಮೂಲಕ ಒಂದು ಸಂದೇಶವನ್ನು ರವಾನೆ ಮಾಡಿದ್ದಾರೆ. ಕುಮಾರ ಸ್ವಾಮಿ ಅವರು ತಮ್ಮ ಟ್ವೀಟ್ ಗಳಲ್ಲಿ, ಸಮಾಜದ ಶಾಂತಿಗಾಗಿ ಹೋರಾಡಿದ್ದಕ್ಕೆ ನನ್ನನ್ನು ಕೊಲ್ಲುವ ಸಂಚು ನಡೆಯುತ್ತಿದೆಯಂತೆ. ನನ್ನನ್ನು ಕೊಲ್ಲಿಸುವ ಕೆಲಸಕ್ಕೆ ಕೈಹಾಕಿದವರೇ ಒಂದು ವಿಚಾರ ತಿಳಿದುಕೊಳ್ಳಿ. ನನ್ನಂತೆ ಹೋರಾಡಬಲ್ಲ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳ ಪಡೆ ನನ್ನ ಬೆನ್ನಿಗಿದೆ. ನನ್ನನ್ನು ಕೊಲ್ಲಬಹುದು. ಆದರೆ ನನ್ನ ಬೆನ್ನಿಗೆ ನಿಂತವರನ್ನು ಕೊಲ್ಲಲಾದೀತೆ?

ಇದೇ ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ನಾನು‌ ನಡೆಸುತ್ತಿರುವ ಹೋರಾಟಕ್ಕೆ ಬೆದರಿರುವ ಬಿಜೆಪಿ ನನ್ನನ್ನು ‘ಪಾಕಿಸ್ತಾನಿ’ ಎಂದು ಕರೆದು ಅಪಮಾನಿಸುವ ಪ್ರಯತ್ನ ಮಾಡುತ್ತಿದೆ. ಕೊಲ್ಲಲು ಬಂದವರದ್ದು ಬೆದರಿಕೆಯ ‘ಉಗ್ರ’ ತಂತ್ರವಾದರೆ, ಅವರದ್ದೇ ಸಿದ್ದಾಂತ ಪ್ರತಿಪಾದಿಸುತ್ತಿರುವ ಬಿಜೆಪಿಯದ್ದು ಅಪಮಾನದ ತಂತ್ರ. ಕರ್ನಾಟಕದಲ್ಲಿ ಒಕ್ಕಲಿಗ ನಾಯಕತ್ವದ ವಿರುದ್ಧ ಹಿಂದಿನಿಂದಲೂ ದೌರ್ಜನ್ಯ ರಾಜಕಾರಣ ಇದ್ದದ್ದೇ. ಮೂದಲಿಸುವುದು, ಸಲ್ಲದ ಆರೋಪ ಮಾಡುವುದು‌. ಈ ಹಿಂದೆ ನಡೆದ ತಂತ್ರಗಳು. ಆದರೆ ಈಗಿನ ಕೊಲ್ಲುವ ಸಂಚು, ಪಾಕಿಸ್ತಾನಿ ಪ್ರಯೋಗ ಒಕ್ಕಲಿಗ ರಾಜಕಾರಣದ ವಿರುದ್ಧ ನಡೆಯುತ್ತಿರುವ ಮತ್ತೊಂದು ಬಗೆಯ ದೌರ್ಜನ್ಯ.

ಒಕ್ಕಲಿಗರು ಹೋರಾಟಕ್ಕಿಳಿದರೆ, ಅಧಿಕಾರಕ್ಕೆ ಬಂದರೆ ಅವರನ್ನು ಬೆದರಿಸುವ, ಸರ್ಕಾರಗಳನ್ನು ಬೀಳಿಸುವ ಕಾಯಕ ಹಿಂದಿನಿಂದ ನಡೆದುಕೊಂಡು ಬಂದಿದೆ. ದೇವೇಗೌಡರಂಥವರ ಮೇಲೇ ಹಲ್ಲೆ ಪ್ರಯತ್ನಗಳು ನಡೆದಿವೆ. ಅವರಿಗೆ ಅಧಿಕಾರ ವಂಚಿಸಲು ಯತ್ನಿಸಿದ್ದನ್ನು ಸಮಾಜ ನೋಡಿದೆ. ಈಗ ಈ ಶಕ್ತಿಗಳು ನನ್ನ ವಿರುದ್ಧ ನಿಂತಿವೆ. ಇದಕ್ಕೆ ಬೆದರುವ ವ್ಯಕ್ತಿ ನಾನಲ್ಲ. “ಒಕ್ಕಲಿಗ ಒಕ್ಕದಿದ್ದರೆ ಬಿಕ್ಕುವುದು ಜಗತ್ತು” ಎಂಬ ಕವಿವಾಣಿ ನೆನಪಿರಲಿ. ಅವರ ಪ್ರತಿನಿಧಿ ನಾನು. ರೈತರಿಗಾಗಿ ಕಾರ್ಯಕ್ರಮ ಹಮ್ಮಿಕೊಂಡವ ನಾನು. ನೀವು ನನ್ನನ್ನು ಕೊಲ್ಲಲಾದೀತೇ? ನನ್ನನ್ನು ಪಾಕಿಸ್ತಾನಿ ಎನ್ನುವಿರೇ? ಮುಂದೊಂದು ದಿನ ಪ್ರಾಯಶ್ಚಿತ ಪಡಲೆಂದೇ ಇಂದು ನೀವು ಮಾಡಿಕೊಳ್ಳುತ್ತಿರುವ ಪಾಪಗಳಿವು ಎಂದು ಬರೆದುಕೊಂಡಿದ್ದಾರೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here