ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮತ್ತು ರಾಜ್ಯ ಕಾಂಗ್ರೆಸ್ ನಡುವೆ ಮಾತಿನ ಸಮರವೇ ಆರಂಭವಾದಂತೆ ಕಾಣುತ್ತಿದೆ. ಕುಮಾರಸ್ವಾಮಿ ಅವರು ಕಾಂಗ್ರೆಸ್ ಮೇಲೇ ವಾಗ್ದಾಳಿ ನಡೆಸಿದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ತನ್ನ ಅಧಿಕೃತ ಖಾತೆಯ ಮೂಲಕ ಕುಮಾರಸ್ವಾಮಿ ಅವರಿಗೆ ಪ್ರತಿಕ್ರಿಯೆ ನೀಡಿತ್ತು. ಅದಕ್ಕೆ ಸರಣಿ ಟ್ವೀಟ್ ಗಳ ಮೂಲಕ ಉತ್ತರ ನೀಡಿರುವ ಕುಮಾರಸ್ವಾಮಿ ಅವರು ಕಾಂಗ್ರೆಸ್‌ ಮೇಲೆ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.
“ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು CM ಆದಾಗ ಕಾಂಗ್ರೆಸ್ ನೈತಿಕತೆ ಚೆನ್ನಾಗಿತ್ತೆ?” ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ. ನನ್ನನ್ನು ನೇರವಾಗಿ ಪ್ರಶ್ನಿಸಲಾಗದ ಕಾಂಗ್ರೆಸ್ನ ಅತಿರಥ ಮಹಾರಥರು ಪಕ್ಷದ ಟ್ವಿಟರ್ ಖಾತೆ ಮೂಲಕ ದಾಳಿ ಮಾಡಿ ಓಡಿ ಹೋಗಿದ್ದಾರೆ. ಆಯ್ತು, ಚರ್ಚೆ ಆರಂಭವಾಗಿದೆ. ಅದನ್ನು ನಾನು ಪೂರ್ತಿಗೊಳಿಸುತ್ತೇನೆ.

ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯದ ನಾಯಕರು ಜೆಡಿಎಸ್ ಎದುರು ನಡು ಬಗ್ಗಿಸಿ ನಾವು ಬೇಡವೆಂದರೂ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರಿಸಿದಿರಿ. ಆನಂತರ ಒತ್ತಡಗಳನ್ನು ಹೇರಿ ಬ್ಯಾಕ್ ಸೀಟ್ ಡ್ರೈವಿಂಗ್ ಮಾಡಿದಾಗ ಕಾಂಗ್ರೆಸ್ನ ನೈತಿಕತೆ ಎಲ್ಲಿತ್ತು? ರೈತರ ಸಾಲ ಮನ್ನಾ ಮಾಡಿ ರಾಜಧರ್ಮ ಪಾಲಿಸಬೇಕಿತ್ತು. ನಿಮ್ಮೆಲ್ಲಾ ಆಟಗಳು ಗೊತ್ತಿದ್ದು ಕೂಡ ರಾಜ್ಯದ ಜನತೆಯ ಹಿತಕ್ಕಾಗಿ ನಾನು ಕೂಡ ಚಾಣಕ್ಯ ನೀತಿಯನ್ನು ಪ್ರದರ್ಶಿಸಿ ರೈತರ ಹಿತ ರಕ್ಷಿಸಿದೆ. ಇದರಲ್ಲಿ ನನ್ನ ವೈಯಕ್ತಿಕ ಲಾಭವೇನಿಲ್ಲ.

ಬೇಡವೆಂದರೂ ನಮ್ಮ ಮನೆ ಬಾಗಿಲಿಗೆ ಬಂದವರು ನೀವು. ನಾನು ಅಮಾಯಕನಾಗಿರಲಿಲ್ಲ. ಕಾಂಗ್ರೆಸ್ನವರು ತಮ್ಮ ಬೇಳೆ ಬೇಯಿಸಿಕೊಳ್ಳಲು ನನ್ನನ್ನು ಪೆದ್ದು ಮಾಡಲು ಮುಂದಾದಿರಿ. ಆದರೆ ನಾಡಿನ ರೈತರ ಹಿತ ಕಾಯಲು ನಾನು ಜಾಣತನ ಪ್ರದರ್ಶಿಸಿದೆ ಎಂಬುದು ನೆನಪಿರಲಿ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಾಗ ಕಾಂಗ್ರೆಸ್ನ ರಾಷ್ಟ್ರ, ರಾಜ್ಯ ನಾಯಕರು ಇದ್ದ ಸಭೆಯಲ್ಲಿ ದೇವೇಗೌಡರು ಕಾಂಗ್ರೆಸ್ಗೆ ಸಲಹೆ ನೀಡಿ @kharge CM ಆಗಲಿ ಎಂದರು. ಖರ್ಗೆ ಸಿಎಂ ಆಗುವುದನ್ನು ಕಾಂಗ್ರೆಸ್ ಒಳಗಿನ ನಾಯಕರೇ ತಡೆದರು‌.

ಆ ನಾಯಕರುಗಳು ಯಾರ್ಯಾರೆಂದು ಕಾಂಗ್ರೆಸ್ ಹುಡುಕಿಕೊಳ್ಳಲಿ. ಆಗ ಅವರ ನೈತಿಕತೆ ಪ್ರಶ್ನೆಗೆ ಅವರದೇ ನಾಯಕರಿಂದ ಉತ್ತರ ಸಿಗಬಹುದು.
ಕುಮಾರಸ್ವಾಮಿ ಅಜ್ಞಾತ, ಅಪ್ರಸ್ತುತರಾಗಿದ್ದಾರೆ ಎಂದೂ ಕಾಂಗ್ರೆಸ್ನ ನಾಯಕರು ಪಕ್ಷದ ಟ್ವಿಟರ್ ಮೂಲಕ ದಾಳಿ ಮಾಡಿದ್ದಾರೆ. ದೇಶದ ಎಷ್ಟು ರಾಜ್ಯಗಳಲ್ಲಿ ಕಾಂಗ್ರೆಸ್ ಪ್ರಸ್ತುತವಾಗಿದೆ? ಪ್ರತ್ಯಕ್ಷವಾಗಿ ರಾಜಕಾರಣ ಮಾಡುತ್ತಿದೆ? ಅನಾಥವಾಗಿದೆ? ಇದಕ್ಕೆ ಉತ್ತರಿಸಲು ನಾಯಕರ್ಯಾರಾದರೂ ಇದ್ದಾರೋ? ಇಲ್ಲ ಕಾಂಗ್ರೆಸ್ನ ಟ್ವಿಟರ್ ಖಾತೆಗೆ ಸೀಮಿತವೋ?

ಬೇರೆ ಪಕ್ಷದ ಶಾಸಕರಿಗೆ ಸ್ವಯಂ ಸೇರ್ಪಡೆಯ ‘ಮಾರುವೇಶ’ ಹಾಕಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದಕ್ಕೂ ಬಿಜೆಪಿ ಅವರು ಆಪರೇಷನ್ ಅಸ್ತ್ರ ಬಳಸಿ ಸರ್ಕಾರವೊಂದನ್ನು ಬುಡಮೇಲು ಮಾಡುವುದಕ್ಕೂ ಅಂತಹ ವ್ಯತ್ಯಾಸವೇನಿಲ್ಲ. ಒಂದು ತೆಳುಗೆರೆಯಷ್ಟೇ ಅಂತರ. ಕಾಂಗ್ರೆಸ್ ಇದರ ಅರ್ಥ ತಿಳಿಯದಷ್ಟು ಕುಬ್ಜ ಸ್ಥಿತಿ ತಲುಪಿರುವುದು ಚೋದ್ಯವೆನಿಸಿದೆ. ಟೀಕೆಗಾಗಿ ಟೀಕೆ ಮಾಡುವ ಇಂತಹ ಮನಸ್ಥಿತಿಯಿಂದಾಗಿಯೇ ಕಾಂಗ್ರೆಸ್ ಇಂದು ಇಂತಹ ದುಃಸ್ಥಿತಿಗೆ ತಲುಪಿದೆ. ಕಪಟ ರಾಜಕಾರಣವನ್ನು ಯಾವ ಬಾಗಿಲಿನಿಂದ ಮಾಡಿದರೂ ಅದು ಅನೀತಿಯೇ ಆಗಿದೆ.

ಕೊನೆಯಲ್ಲಿ ಈ ಕೆಳಗಿನ ಸಾಲುಗಳನ್ನು ಅವರು ಬರೆದಿದ್ದರಾರೆ.
“ತನ್ನರಿದೆ ಅರಿವೆಂತುಂಟೊ?
ತನ್ನ ಮರೆದ ಮರೆಹೆಂತಂಟೊ?
ಅರೆದು ಮರೆದವರು
ನಿಮ್ಮ ಪ್ರತಿಬಿಂಬದಂತಿಪ್ಪರು ಕಾಣಾ, ಗುಹೇಶ್ವರಾ”

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here