ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರ್ ಸ್ಪರ್ಧಿಸುವುದು ಖಚಿತವಾಗಿದೆ. ಮಂಡ್ಯ ಲೋಕಸಭಾ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಮೈತ್ರಿ ಪಕ್ಷದ ಅಭ್ಯರ್ಥಿ ಎಂದು ಸಚಿವ ಸಾ.ರಾ. ಮಹೇಶ್​ ಘೋಷಣೆ ಮಾಡಿರುವುದು ಕೂಡ ಅಚ್ಚರಿ ಮೂಡಿಸಿದೆ. ಮೈಸೂರು ಜಿಲ್ಲೆ ಕೆ.ಆರ್. ನಗರ ತಾಲ್ಲೂಕಿನ ಹರಂಬಳ್ಳಿ ಗ್ರಾಮದ ಜನಸಂಪರ್ಕ ಸಭೆ ನಂತರ ಮಾತನಾಡಿದ ಅವರು, “ಈ ಬಗ್ಗೆ ಈಗಾಗಲೇ ತೀರ್ಮಾನಿಸಲಾಗಿದೆ. ಮೈಸೂರು ಲೋಕಸಭೆಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅಭ್ಯರ್ಥಿಯಾಗುವಂತೆ ಒತ್ತಾಯಿಸಿದ್ದೇವೆ. ಆದರೆ, ಇನ್ನೂ ಅಂತಿಮ ತೀರ್ಮಾನವಾಗಿಲ್ಲ. ಮಂಡ್ಯದಿಂದ ನಿಖಿಲ್ ಜೆಡಿಎಸ್ ಅಭ್ಯರ್ಥಿ ಆಗುತ್ತಾರೆ,” ಎಂದು ಅವರು ಹೇಳಿದ್ದಾರೆ. ಅತ್ತ ಮಂಗಳೂರಿನಲ್ಲಿ ಹೆಚ್ ಡಿ ದೇವೇಗೌಡರು ಸಹ ನಿಖಿಲ್ ಸ್ಪರ್ಧೆ ಮಾಡುವುದಾದರೆ ನನ್ನ ಅಭ್ಯಂತರವಿಲ್ಲ ಎಂದಿದ್ದಾರೆ‌.

ಪ್ರವಾಸೋದ್ಯಮ ಸಚಿವರಾದ ಸಾ.ರಾ. ಮಹೇಶ್ ಅವರು ಈ ಕುರಿತು ಮಾಹಿತಿ ನೀಡಿದ್ದು, ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ನಿಖಿಲ್ ಕುಮಾರ್ ಅವರೇ ಮೈತ್ರಿಕೂಟದ ಅಧಿಕೃತ ಅಭ್ಯರ್ಥಿ ಎಂದು ಘೋಷಿಸಿದ್ದಾರೆ. ಅತ್ತ ಸುಮಲತಾ ಅಂಬರೀಶ್ ಅವರೂ ಸಹ ಮಂಡ್ಯದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತವಾಗಿದ್ದು ಮಂಡ್ಯ ಜನರ ಆಶಯದಿಂದ ನಾನು ಸ್ಪರ್ಧೆ ಮಾಡುವುದು ಖಚಿತ ಎಂದಿದ್ದಾರೆ‌.

ಕಳೆದ 2 ದಿನಗಳಿಂದ ಮೈಸೂರು -ಕೊಡಗು ಲೋಕಸಭೆ ಕ್ಷೇತ್ರದಿಂದ ನಿಖಿಲ್ ಕುಮಾರ್ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿವೆ. ಆದರೆ, ಸಾ.ರಾ. ಮಹೇಶ್ ಅವರು, ಮಂಡ್ಯ ಕ್ಷೇತ್ರದಿಂದ ಮೈತ್ರಿಕೂಟದ ಅಧಿಕೃತ ಅಭ್ಯರ್ಥಿಯಾಗಿ ನಿಖಿಲ್ ಕುಮಾರ್ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಅಂಬರೀಶ್ ಕಾಂಗ್ರೆಸ್ ಟಿಕೆಟ್ ಬಯಸಿದ್ದಾರೆ. ಆದರೆ, ಕಾಂಗ್ರೆಸ್ ಟಿಕೆಟ್ ಸಿಗದಿದ್ದರೂ ಅವರು ಸ್ಪರ್ಧಿಸುವುದು ಖಚಿತವಾಗಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here