ಇಂದು ಸುಪ್ರೀಂ ಕೋರ್ಟ್ ನಲ್ಲಿ ಶಬರಿಮಲೆ ಅಯ್ಯಪ್ಪನ‌ ಸನ್ನಿಧಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ತೀರ್ಪಿನ ಜೊತೆಗೆ ಮತ್ತೊಂದು ರಾಷ್ಟ್ರೀಯ ಮಹತ್ವದ ವಿಷಯವಾದ,
ರಫೇಲ್ ಡೀಲ್ ಗೆ ಸಂಬಂಧಿಸಿದಂತೆ ಈ ಹಿಂದೆ ಸುಪ್ರಿಂ‌ಕೋರ್ಟ್ ಮೋದಿ ಸರ್ಕಾರಕ್ಕೆ ಕ್ಲೀನ್‍ಚಿಟ್ ನೀಡಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿದ್ದು, ಅರ್ಜಿಗಳ ತೀರ್ಪನ್ನು ಕೂಡಾ ಇಂದು ಪ್ರಕಟಿಸಲಿದೆ. ಕೇಂದ್ರದ ಮಾಜಿ ಸಚಿವರಾದ ಯಶ್ವಂತ್ ಸಿನ್ಹಾ, ಅರುಣ್ ಶೌರಿ ಮತ್ತು ವಕೀಲ ಪ್ರಶಾಂತ್ ಭೂಷಣ್ ಅವರು 21 ಫೆಬ್ರವರಿ 2019 ರಲ್ಲಿ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಗಳ ಸಂಬಂಧದ ತೀರ್ಪು ಕೂಡಾ ಇಂದು ಹೊರಬೀಳಲಿದೆ.

ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು, ಡೀಲ್ ರದ್ದುಗೊಳಿಸಿ ಸಿಬಿಐ ತನಿಖೆ ನಡೆಸಬೇಕೆಂದು ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲಿಸಿದ್ದ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಯ್ ಅವರ ನೇತೃತ್ವದ ನ್ಯಾಯ ಪೀಠ 2018 ನವೆಂಬರ್ 14 ರಂದು ವಿಚಾರಣೆ ಅಂತ್ಯಗೊಳಿಸಿ ಡಿಸೆಂಬರ್ 14 ಕ್ಕೆ ತನ್ನ ತೀರ್ಪು ಪ್ರಕಟಿಸಿ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿತ್ತು. ಆದರೆ ಸುಪ್ರೀಂ ಕೋರ್ಟ್ ನ ತೀರ್ಪಿಗೆ ಮರುಪರುಶೀಲನಾ ಅರ್ಜಿಯನ್ನು ಸಲ್ಲಿಸಿದ ಹಿನ್ನೆಲೆಯಲ್ಲಿ ಕಳೆದ ಮೇ 10 ರಂದು ವಿಚಾರಣೆಯನ್ನು ಮುಗಿಸಿದ್ದ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿತ್ತು.

ಇಂದು ಇದರ ಜೊತೆಗೆ ರಾಹುಲ್ ಗಾಂಧಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ತೀರ್ಪು ಕೂಡ ಹೊರಬೀಳುವ ಸಾಧ್ಯತೆಗಳು ಕೂಡಾ ಇದೆ ಎನ್ನಲಾಗಿದೆ. ಪ್ರಧಾನಿ ಮೋದಿಯ ಬಗ್ಗೆ ಚೌಕಿದಾರ್ ಚೋರ್ ಹೈ ಎಂಬ ರಾಹುಲ್ ಗಾಂಧಿ ಹೇಳಿಕೆ ತೀವ್ರ ವಿವಾದ ಸೃಷ್ಟಿಸಿತ್ತು. ಕೋರ್ಟ್ ತೀರ್ಪನ್ನು ತಪ್ಪಾಗಿ ಅರ್ಥೈಸಿಕೊಂಡು ಇಂತಹುದೊಂದು ಹೇಳಿಕೆಯನ್ನು ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿಯ ಮೀನಾಕ್ಷಿ ಲೇಖಿ ರಾಹುಲ್ ಗಾಂಧಿಯವರ ವಿರುದ್ಧ ಕೋರ್ಟ್ ಮೊರೆ ಹೋಗಿದ್ದರು. ಈ ಸಂಬಂಧ ರಾಹುಲ್ ಗಾಂಧಿ ಕ್ಷಮೆ ಯಾಚಿಸಿದ್ದನ್ನು ನಾವಿಲ್ಲಿ ಸ್ಮರಿಸಬಹುದು.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here